ಬೆಂಗಳೂರು : ಕೊರೊನಾ ವೈರಸ್ ಸೋಂಕು ನಿಯಂತ್ರಣ ಹಾಗೂ ಲಾಕ್ ಡೌನ್ ವಿಷಯಗಳ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಜಿಲ್ಲಾಧಿಕಾರಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್ ನಡೆಸಿ ಚರ್ಚಿಸಿದರು. ಈ ವೇಳೆ ಕಂಟೈನ್ಮೆಂಟ್ ಝೋನ್ ಹೊರತುಪಡಿಸಿ ಉಳಿದೆಡೆ ಕೇಂದ್ರ ಸರಕಾರದ ಮಾರ್ಗಸೂಚಿಯಂತೆ ಆರ್ಥಿಕ ಚಟುವಟಿಕೆಗಳನ್ನು ಪ್ರಾರಂಭಿಸುವಂತೆ ಮುಖ್ಯಮಂತ್ರಿ ಸೂಚಿಸಿದ್ದಾರೆ. ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳಲ್ಲಿ ಆಹಾರ ಧಾನ್ಯಗಳನ್ನು ಸಾರ್ವಜನಿಕರಿಗೆ ಹಂಚಿಕೆ ಮಾಡುವ ಕುರಿತು ಕ್ರಮ ವಹಿಸಲು ಅವರು ನಿರ್ದೇಶಿಸಿದರು.
ಇದಲ್ಲದೆ ರಾಜ್ಯದ ವಿವಿಧ ಜಿಲ್ಲೆಗಳಿಗೆ ತೆರಳ ಬಯಸಿರುವ ವಲಸೆ ಕಾರ್ಮಿಕರಿಗೆ ಕೆಎಸ್ ಆರ್ ಟಿಸಿ ಬಸ್ಸುಗಳಲ್ಲಿ ಒನ್ ವೇ ದರ ಪಾವತಿಸಿ ಪ್ರಯಾಣಿಸಲು ಅವಕಾಶ ಕಲ್ಪಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಹೊರ ಜಿಲ್ಲೆಗಳಿಂದ ಆಗಮಿಸಿದವರನ್ನು ಸಾಂಸ್ಥಿಕ ಕ್ವಾರಂಟೈನ್ ಮಾಡುವಂತೆ ಸೂಚಿಸಲಾಗಿದೆ. ಲಾಕ್ ಡೌನ್ ಸಂದರ್ಭದಲ್ಲಿ ಬೇರೆ ಊರಿನಲ್ಲಿ ಸಿಲುಕಿಕೊಂಡವರು ತಮ್ಮ ಊರಿಗೆ ಅಥವಾ ಕೆಲಸದ ಸ್ಥಳಗಳಿಗೆ ಹಿಂದಿರುಗಲು ಒಂದು ದಿನಕ್ಕೆ, ಒಂದು ಬಾರಿಗೆ ಪ್ರಯಾಣಿಸಲು ಅಂತರ್ ಜಿಲ್ಲಾ ಪ್ರಯಾಣಕ್ಕೆ ಪಾಸ್ ನೀಡಲು ಕಾನ್ಫರೆನ್ಸ್ ವೇಳೆ ತೀರ್ಮಾನಿಸಲಾಯಿತು.
ವಿಡಿಯೋ ಕಾನ್ಫರೆನ್ಸ್ ನಲ್ಲಿ ವಿಜಯಪುರ, ಬೆಳಗಾವಿ, ಬಾಗಲಕೋಟೆ, ಮೈಸೂರು, ದಕ್ಷಿಣ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕಲಬುರಗಿ ಜಿಲ್ಲೆಗಳ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಾಯಿತು.