Education Department
ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸವನ್ನು ಪ್ರಸಕ್ತ ವರ್ಷದಿಂದ ಪುನರಾರಂಭಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಅನುಮತಿ ನೀಡಿದೆ.
ಕಳೆದ ಎರಡು ವರ್ಷಗಳಿಂದ ಕೋವಿಡ್ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸ ಸ್ಥಗಿತಗೊಂಡಿತ್ತು.
ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಶಾಲಾ ಮಾನ್ಯತೆ ನವೀಕರಿಸಿಕೊಂಡಿರುವ ಖಾಸಗಿ ಶಾಲೆಗಳಿಗೆ ಮಾತ್ರ ಪ್ರವಾಸ ಕೈಗೊಳ್ಳಲು ಅನುಮತಿ ನೀಡಲಾಗಿದೆ. ಈ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ಈಗ ಕೊರೋನಾ ಪ್ರಕರಣಗಳ ಸಂಖ್ಯೆ ಇಳಿಮುಖವಾದ ಹಿನ್ನಲೆಯಲ್ಲಿ 2022-23ನೇ ಸಾಲಿನ ಶೈಕ್ಷಣಿಕ ಪ್ರವಾಸಕ್ಕೆ ಅನುಮತಿಸಲಾಗಿದೆ ಎಂದು ತಿಳಿಸಿದ್ದಾರೆ.
ಪ್ರವಾಸದ ಸಮಯದಲ್ಲಿ ಯಾವುದೇ ಅವಘಡ ಸಂಭವಿಸಿದರೆ ಶಾಲಾ ಮುಖ್ಯಸ್ಥರೇ ನೇರ ಹೊಣೆಯಾಗಿರುತ್ತಾರೆ. ಇದಕ್ಕೆ ಇಲಾಖೆ ಜವಾಬ್ದಾರಿಯಲ್ಲ ಎಂದು ಸ್ಪಷ್ಟಪಡಿಸಿದ್ದು, ಪೋಷಕರ ಒಪ್ಪಿಗೆ ಪಡೆದ ವಿದ್ಯಾರ್ಥಿಗಳನ್ನು ಮಾತ್ರ ಶೈಕ್ಷಣಿಕ ಪ್ರವಾಸಕ್ಕೆ ಕರೆದೊಯ್ಯಲು ಸೂಚಿಸಲಾಗಿದೆ.
ವಿದ್ಯಾರ್ಥಿಗಳ ಕಲಿಕೆಗೆ ಪೂರಕವಾಗುವ ಸ್ಥಳಗಳನ್ನು ಶೈಕ್ಷಣಿಕ ಪ್ರವಾಸಕ್ಕೆ ಆಯ್ಕೆ ಮಾಡಿಕೊಳ್ಳುವಂತೆ ಸೂಚಿಸಲಾಗಿದ್ದು, ಶಾಲಾ ದಿನಗಳಲ್ಲಿ ಪ್ರವಾಸ ಕೈಗೊಂಡರೆ ಮುಂದಿನ ದಿನಗಳಲ್ಲಿ ಶನಿವಾರ ಪೂರ್ಣ ದಿನ ಅಥವಾ ರವಿವಾರ ಶಾಲೆ ನಡೆಸಿ ಪಠ್ಯ ಚಟುವಟಿಕೆಗಳನ್ನು ಸರಿದೂಗಿಸುವಂತೆ ತಿಳಿಸಲಾಗಿದೆ.








