ಈದ್ ಮಿಲಾದ್ ಹಬ್ಬದಂದು ಸಾಮೂಹಿಕ ಮೆರವಣಿಗೆಗೆ ನಿರ್ಬಂಧ
ಬೆಂಗಳೂರು : ಕೋವಿಡ್ ಹಿನ್ನೆಲೆ ಈದ್ ಮಿಲಾದ್ ಹಬ್ಬವನ್ನು ಅತ್ಯಂತ ಸರಳವಾಗಿ ಆಚರನೆ ಮಾಡುವಂತೆ ರಾಜ್ಯ ಸರ್ಕಾರವು ಸೂಚಿಸಿದ್ದು, ಹೊಸ ಮಾರ್ಗಸೂಚಿ ಪ್ರಕಟಿಸಿದೆ. ಅಲ್ಲದೇ ಈ ಬಾರಿ ಈದ್ ಮಿಲಾದ್ ಹಬ್ಬದಂದು ಸಾಮೂಹಿಕ ಮೆರವಣಿಗೆಗೆ ನಿರ್ಬಂಧ ವಿಧಿಸಿದೆ. ಅಷ್ಟೇ ಅಲ್ಲದೇ ವಾಲ್ಮೀಕಿ ಜಯಂತಿಯನ್ನೂ ಕೂಡ ಸರಳವಾಗಿ ಆಚರಣೆ ಮಾಡುವಂತೆ ಸರ್ಕಾರ ಸೂಚಿಸಿದೆ. ಅ.20ರಂದು ನಡೆಯುವ ವಾಲ್ಮೀಕಿ ಜಯಂತಿ ಮತ್ತು ಈದ್ ಮಿಲಾದ್ ಆಚರಣೆ ಸಂದರ್ಭದಲ್ಲಿ ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ಕಂದಾಯ ಇಲಾಖೆ ಹೊರಡಿಸಿದ್ದು, ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಲು ಕ್ರಮ ಕೈಗೊಳ್ಳುವಂತೆ ಎಲ್ಲ ಜಿಲ್ಲಾಧಿಕಾರಿ, ಎಸ್‍ಪಿ, ಬಿಬಿಎಂಪಿ ಆಯುಕ್ತರು ಹಾಗೂ ನಗರ ಪೊಲೀಸ್ ಆಯುಕ್ತರಿಗೆ ನಿರ್ದೇಶನ ನೀಡಿದೆ.
ಹಬ್ಬದ ಅಂಗವಾಗಿ ನಡೆಯುವ ಕಾರ್ಯಕ್ರಮ, ಸಭೆ-ಸಮಾರಂಭಗಳಲ್ಲಿ ನೂರು ಜನಕ್ಕಿಂತ ಹೆಚ್ಚು ಮಂದಿ ಒಟ್ಟಿಗೆ ಸೇರುವಂತಿಲ್ಲ. ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಪಾಲಿಸಬೇಕು, ಮುಖಗವಸು ಧರಿಸಬೇಕು, ಧ್ವನಿವರ್ಧಕಗಳ ಬಳಕೆಯನ್ನು ನಿಷೇಸಲಾಗಿದೆ. 60 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯ ನಾಗರಿಕರು ಮತ್ತು 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಮನೆಯಲ್ಲೇ ಹಬ್ಬ ಆಚರಿಸಬೇಕು ಎಂದು ನಿರ್ದೇಶಿಸಲಾಗಿದೆ. ಅಲ್ಲದೇ ಸಾಮೂಹಿಕ ಪ್ರಾರ್ಥನೆ ವೇಳೆ ಹೆಚ್ಚು ಜನರು ಆಗಮಿಸುವಂತಿಲ್ಲ. ಸ್ಯಾನಿಟೈಜರ್ ಬಳಸಬೇಕು. ಮಸೀದಿಗಳಲ್ಲಿ ಕನಿಷ್ಟ 6 ಅಡಿ ಅಂತರ ಕಾಯ್ದುಕೊಂಡು ಪ್ರಾರ್ಥನೆ ಸಲ್ಲಿಸಬೇಕು. ಕಾನೂನು ಸುವ್ಯವಸ್ಥೆಗೆ ಧಕ್ಕೆ ಬರದಂತೆ ಕಾಪಾಡಬೇಕೆಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.
ಅಲ್ಲದೇ ಮಸೀದಿ ಹೊರತುಪಡಿಸಿ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ಈದ್ ಮಿಲಾದ್ ಪ್ರಯುಕ್ತ ಸಾಮೂಹಿಕ ಪ್ರಾರ್ಥನೆ ಆಯೋಜಿಸುವಂತಿಲ್ಲ. ಪರಸ್ಪರ ಹಸ್ತ ಲಾಘವ ಮತ್ತು ಆಲಿಂಗನಗಳನ್ನು ಮಾಡುವಂತಿಲ್ಲ ಎಂದು ಸರ್ಕಾರ ಹೊರಡಿಸಿರುವ ಮಾರ್ಗಸೂಚಿಯಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ.








