ಧಾರವಾಡ: ಚುನಾವಣೆಯಲ್ಲಿ ಸೋತಿದ್ದಕ್ಕೆ ನೌಕರರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಕರ್ನಾಟಕ ವಿಶ್ವವಿದ್ಯಾಲಯದ (Karnataka University) ನೌಕರರ ಸಹಕಾರ ಸಂಘದ ಚುನಾವಣೆಯಲ್ಲಿ (Election) ಸೋತಿದ್ದ ಚಂದ್ರಕಾಂತ್ ಸಾವಳಗಿ(55) ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಘಟನೆ ನಗರದ ಮುರುಘಾಮಠದ ಹತ್ತಿರ ನಡೆದಿದೆ.
ಆತ್ಮಹತ್ಯೆಗೆ ಶರಣಾಗಿರುವ ಚಂದ್ರಕಾಂತ್ ಅವರು ವಿವಿಯ ಲೆಕ್ಕಪತ್ರ ವಿಭಾಗದ ಸೂಪರಿಂಟೆಂಡೆಂಟ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಶನಿವಾರ ಫಲಿತಾಂಶ ಹೊರ ಬೀಳುತ್ತಿದ್ದಂತೆ ಮನೆಗೆ ತೆರಳಿದ್ದ ಅವರು ಅಂದೇ ರಾತ್ರಿ ನೇಣಿಗೆ ಶರಣಾಗಿದ್ದಾರೆ ಎನ್ನಲಾಗಿದೆ. ಕೂಡಲೇ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆಗ ಮನೆಗೆ ತೆರಳಿದ ಪೊಲೀಸರು ಬಾಗಿಲು ತೆರೆದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಸೋಲನುಭವಿಸಿದ್ದಕ್ಕೆ ಚಂದ್ರಕಾಂತ್ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ಕುರಿತು ಶಹರ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.