ಬೆಂಗಳೂರು ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ – ಕೆಲಕಾಲ ಆತಂಕ
ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅಪರಿಚಿತ ವ್ಯಕ್ತಿಗಳು ಮುಂಜಾನೆ ಹುಸಿ ಬಾಂಬ್ ಕರೆ ಮಾಡಿದ್ದಾರೆ. ಇದರಿಂದಾಗಿ ವಿಮಾನ ನಿಲ್ದಾಣದಲ್ಲಿ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಇಂದು ಬೆಳಗಿನ ಜಾವ 3.30 ರ ಸುಮಾರಿಗೆ ಅಪರಿಚಿತ ವ್ಯಕ್ತಿಯೊಬ್ಬ ಪೊಲೀಸ್ ಕಂಟ್ರೋಲ್ ರೂಂಗೆ ಕರೆ ಮಾಡಿ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿರುವುದಾಗಿ ಮಾಹಿತಿ ನೀಡಿದ್ದಾನೆ.
ಬಾಂಬ್ ಇಟ್ಟಿರುವ ಬಗ್ಗೆ ಕರೆ ಬಂದ ತಕ್ಷಣ ಅಲರ್ಟ್ ಆದ ವಿಮಾನ ನಿಲ್ದಾಣದ ಪೊಲೀಸರು ತಕ್ಷಣವೇ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದರು. ಡಾಗ್ ಸ್ಕ್ವಾಡ್, ಸಿಎಸ್ ಎಫ್, ಬಿಎಸ್ ಎಫ್ ತಂಡದವರು ವಿಮಾನ ನಿಲ್ದಾಣದಲ್ಲಿ ಪರಿಶೀಲನೆ ನಡೆಸಿದ್ದಾರೆ.
ಸುಮಾರು 2 ಗಂಟೆಗಳಿಗೂ ಹೆಚ್ಚು ಕಾಲ ತಪಾಸಣೆ ನಡೆಸಿದ ಅಧಿಕಾರಿಗಳು ಮತ್ತು ಸಿಬ್ಬಂದಿ ಬಳಿಕ ಇದೊಂದು ಹುಸಿ ಬಾಂಬ್ ಕರೆ ಎಂದು ತಿಳಿದು ನಿಟ್ಟುಸಿರು ಬಿಟ್ಟರು. ಸದ್ಯ ಕರೆ ಮಾಡಿದವನ ಜಾಡು ಬೆನ್ನತ್ತಿರೋ ಪೊಲೀಸರು ಅಪರಿಚಿತನ ಹುಡುಕಾಟದಲ್ಲಿ ತೊಡಗಿದ್ದು, ಹುಸಿಬಾಂಬ್ ಕರೆಯ ಉದ್ದೇಶ ತಿಳಿಯಬೇಕಿದೆ.