ವರಮಹಾಲಕ್ಷ್ಮೀ ಹಬ್ಬದ ಹಿನ್ನೆಲೆಯಲ್ಲಿ ತಾವರೆ ಹೂವು ತರಲು ಹೋಗಿದ್ದ ತಂದೆ- ಮಗ ಘೋರವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ಘಟನೆ ಬೆಂಗಳೂರು ಗ್ರಾಮಾಂತರದ ದೊಡ್ಡಬಳ್ಳಾಪುರ ತಾಲೂಕಿನ ಭೂಚನಹಳ್ಳಿ ಗ್ರಾಮದ ಕೆರೆಯಲ್ಲಿ ನಡೆದಿದೆ. ಮೃತರನ್ನು ಪುಟ್ಟರಾಜು (42) ಹಾಗೂ ಮಗ ಕೇಶವ (14) ಎಂದು ಗುರುತಿಸಲಾಗಿದೆ. ಮೃತರು ದೊಡ್ಡಬಳ್ಳಾಪುರ ಶಾಂತಿನಗರದವರು ಎನ್ನಲಾಗಿದೆ.
ವರಮಹಾಲಕ್ಷ್ಮೀ ಹಬ್ಬದ ಹಿನ್ನೆಲೆಯಲ್ಲಿ ಮಾರಾಟ ಮಾಡುವುದಕ್ಕಾಗಿ ಭೂಚನಹಳ್ಳಿ ಹತ್ತಿರದ ಕೆರೆ ತಾವರೆ ಹೂ ಕೀಳಲು ತಂದೆ- ಮಗ ತೆರಳಿದ್ದರು. ಈ ಸಂದರ್ಭದಲ್ಲಿ ಅವಘಡ ನಡೆದಿದೆ.
ಇಬ್ಬರಿಗೂ ಆಳ ತಿಳಯದ ಹಿನ್ನೆಲೆಯಲ್ಲಿ ಕೆಸರಿನಲ್ಲಿ ಸಿಲುಕಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಮತ್ತೊಬ್ಬ ತಾವರೆ ಹೂ ಮಾರಾಟಗಾರ ಕೆರೆಯ ಬಳಿ ಹೋಗಿದ್ದ ಸಂದರ್ಭದಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. ಅಗ್ನಿಶಾಮಕದಳದ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ, ಮೃತದೇಹಗಳಿಗೆ ಶೋಧ ನಡೆಸಿ ದೇಹಗಳನ್ನು ಹೊರ ತೆಗೆದಿದ್ದಾರೆ. ಈ ಕುರಿತು ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.