ಬೆಂಗಳೂರು: ಕಾಂಗ್ರೆಸ್ ಪಾಳಯದಲ್ಲಿ ಮೂರು ಹೆಚ್ಚುವರಿ ಡಿಸಿಎಂ ಹುದ್ದೆಗಳ ಸೃಷ್ಟಿ ವಿಚಾರ ಭರ್ಜರಿ ಸದ್ದು ಮಾಡುತ್ತಿದೆ. ಲೋಕಸಭೆ ಚುನಾವಣೆ ಗೆಲುವಿನ ದೃಷ್ಟಿಯ ಹಿನ್ನೆಲೆಯಲ್ಲಿ ಜಾತಿವಾರು ಡಿಸಿಎಂ ಹುದ್ದೆ ರಚಿಸಲು ಬೇಡಿಕೆ ಕೇಳಿ ಬರುತ್ತಿವೆ.
ಡಿ.ಕೆ. ಶಿವಕುಮಾರ್ ಅವರ ಏಕೈಕ ಡಿಸಿಎಂ ಹುದ್ದೆಯ ಮಹತ್ವ ತಗ್ಗಿಸಲು ಪ್ರಯತ್ನಗಳು ನಡೆಯುತ್ತಿವೆ ಎನ್ನಲಾಗುತ್ತಿದೆ. ಹೊಸದಾಗಿ ಮೂರು ಡಿಸಿಎಂ ಹುದ್ದೆ ಸೃಷ್ಟಿಯ ಅಗತ್ಯವನ್ನು ಹಿರಿಯ ಸಚಿವರೇ ಪ್ರತಿಪಾದಿಸುತ್ತಿದ್ದಾರೆ ಎನ್ನಲಾಗುತ್ತಿದೆ. ಲೋಕಸಭೆ ಚುನಾವಣೆಯಲ್ಲಿ ಪಕ್ಷ ಹೆಚ್ಚು ಸ್ಥಾನ ಗೆಲ್ಲಲು ಜಾತಿ ಲೆಕ್ಕಾಚಾರದಲ್ಲಿ ಹೊಸದಾಗಿ 3 ಡಿಸಿಎಂ ಹುದ್ದೆಗಳನ್ನು ಸೃಷ್ಟಿಸಬೇಕು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಪ್ರಸ್ತಾವ ಸಲ್ಲಿಸಿದ್ದಾರೆ ಎನ್ನಲಾಗಿದೆ.
ಇತ್ತೀಚೆಗಷ್ಟೇ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ನಡೆದ ಡಿನ್ನರ್ ಕೂಟದಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ, ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಸಹಕಾರ ಸಚಿವ ಕೆ.ಎನ್. ರಾಜಣ್ಣ ಸೇರಿದಂತೆ ಹಲವರು ಭಾಗವಹಿಸಿ, ಈ ಕುರಿತು ಚರ್ಚಿಸಿದ್ದಾರೆ ಎನ್ನಲಾಗಿದೆ. ಹೀಗಾಗಿ ಕುತೂಹಲ ಹೆಚ್ಚಾಗಿದೆ. ದಲಿತ, ಲಿಂಗಾಯತ, ಮೈನಾರಿಟಿ ಕೋಟಾದಲ್ಲಿ ಕೂಡ ಮೂರು ಡಿಸಿಎಂ ಹುದ್ದೆ ಸೃಷ್ಟಿಸಬೇಕೆಂಬ ಕೂಗು ಕೇಳಿ ಬರುತ್ತಿದೆ.








