ಬೆಂಗಳೂರು: ಶೌಚಾಲಯ ಸ್ವಚ್ಛತೆಗೆ ವಿದ್ಯಾರ್ಥಿಗಳನ್ನು ಬಳಕೆ ಮಾಡಿದರೆ ಅಂತಹ ವ್ಯಕ್ತಿಗಳ ವಿರುದ್ಧ ಎಫ್ ಐಆರ್ ದಾಖಲಿಸಲಾಗುವುದು ಎಂದು ಶಿಕ್ಷಣ ಇಲಾಖೆ ಎಚ್ಚರಿಕೆ ನೀಡಿದೆ.
ನಿಯಮ ಮೀರಿ ಇಲಾಖೆ ಅಧಿಕಾರಿಗಳು, ಶಾಲಾ ಮುಖ್ಯ ಶಿಕ್ಷಕರು ಹಾಗೂ ಸಿಬ್ಬಂದಿ ವಿದ್ಯಾರ್ಥಿಗಳನ್ನು ಸ್ವಚ್ಛತೆಗೆ ಬಳಸಿಕೊಂಡಲ್ಲಿ ಇಲಾಖೆ ವತಿಯಿಂದ ಶಿಸ್ತುಕ್ರಮ ಹಾಗೂ ಎಫ್‌ಐಆರ್ ದಾಖಲಿಸಲಾಗುವುದು ಎಂಬ ಎಚ್ಚರಿಕೆ ನೀಡಿ ಆದೇಶ ಹೊರಡಿಸಲಾಗಿದೆ.
ಈ ಕುರಿತು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತೆ ಬಿ.ಬಿ. ಕಾವೇರಿ ಶಾಲೆಗಳ ಶೌಚ ಗೃಹ ಸ್ವಚ್ಛತೆಗೆ ಮಾರ್ಗದರ್ಶಿ ಪ್ರಕಟಿಸಿ ನಿರ್ದೇಶನ ನೀಡಿದ್ದಾರೆ. ಎಲ್ಲ ಶಾಲೆಗಳಿಗೆ ಶಾಲಾ ನಿರ್ವಹಣಾ ಅನುದಾನ ಬಿಡುಗಡೆ ಮಾಡಿದೆ. ಈ ಅನುದಾನವನ್ನು ಆದ್ಯತೆ ಮೇರೆಗೆ ಶೌಚ ಗೃಹದ ಸ್ವಚ್ಛತಾ ಕಾರ್ಯಗಳಿಗೆ ಬಳಸಿಕೊಂಡು, ಆಯಾ ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿಗಳ (ಎಸ್‌ಡಿಎಂಸಿ) ಸಹಕಾರದೊಂದಿಗೆ, ಸ್ಥಳೀಯ ಲಭ್ಯವಿರುವ ಸಂಪನ್ಮೂಲ ಬಳಸಿಕೊಳ್ಳುವಂತೆ ಸೂಚಿಸಲಾಗಿದೆ.