ಹುಬ್ಬಳ್ಳಿ: ಕೆಲ ದಿನಗಳಿಂದ ಶಾಂತವಾಗಿದ್ದ ರಾಜ್ಯದ ವಾಣಿಜ್ಯ ನಗರಿ ಹುಬ್ಬಳ್ಳಿಯ ಜನತೆ ಕಳೆದ ರಾತ್ರಿ ನಡೆದ ಡಬಲ್ ಮರ್ಡರ್ ಗೆ ಬೆಚ್ಚಿ ಬಿದ್ದಿದ್ದಾರೆ.
ಮಧ್ಯರಾತ್ರಿ ಇಬ್ಬರು ಯುವಕರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಲೆ ಮಾಡಿದ್ದಾರೆ. ಹುಬ್ಬಳ್ಳಿಯ ಗೋಪನಕೊಪ್ಪ ಬಸ್ ನಿಲ್ದಾಣದ ಬಳಿ ಈ ಘಟನೆ ನಡೆದಿದ್ದು, ಮಂಜುನಾಥ್ ಕಬ್ಬಿನ್ ಹಾಗೂ ನಿಯಾಜ್ ಎಂಬುರನ್ನು ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.
ಸ್ಥಳಕ್ಕೆ ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಈ ಇಬ್ಬರೂ ಯುವಕರ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಕೆಲ ದಿನಗಳ ಹಿಂದಷ್ಟೇ ಹುಬ್ಬಳ್ಳಿಯಲ್ಲಿ ಉದ್ಯಮಿಯೊಬ್ಬರನ್ನು ಹಾಡಹಗಲೇ ಪಿಸ್ತೂಲ್‍ನಿಂದ ಗುಂಡಿಟ್ಟು ದುಷ್ಕರ್ಮಿಗಳು ಕೊಲೆ ಮಾಡಿದ್ದರು. ಇದಾದ ಕೆಲವೇ ದಿನಗಳಲ್ಲಿ ಈ ಘಟನೆ ನಡೆದಿರುವುದು ಜನರಲ್ಲಿ ಭಯದ ವಾತಾವರಣ ಸೃಷ್ಟಿಸಿದೆ.