ಮಂಡ್ಯ : ಸ್ವಂತ ಖರ್ಚು, ಸ್ವಂತ ಕೆಲಸದೊಂದಿಗೆ ಗುಡ್ಡಗಾಡು ಪ್ರದೇಶದಲ್ಲಿ 16 ಕೆರೆಗಳನ್ನು ನಿರ್ಮಿಸಿ ಆಧುನಿಕ ಭಗೀರಥ ಎಂದೇ ಖ್ಯಾತಿ ಪಡೆದಿರುವ ಕಾಮೇಗೌಡರ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕಾಮೇಗೌಡರ ಕಾಲಿಗೆ ತೀವ್ರವಾದ ಗಾಯವಾಗಿದ್ದು, ಊತಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಗುರುವಾರ ಸಂಜೆ ಕಾಮೇಗೌಡರು ಮಳವಳ್ಳಿ ತಾಲೂಕಾಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಹಿಂದಿನಿಂದಲೂ ನರಸಂಬಂಧಿ ಕಾಯಿಲೆಯಿಂದ ಕಾಮೇಗೌಡರು ಬಳಲುತ್ತಿದ್ದಾರೆ. ಇನ್ನು ಕಾಮೇಗೌಡರು ಆಸ್ಪತ್ರೆಗೆ ದಾಖಲಾಗಿರುವ ಬಗ್ಗೆ ತಿಳಿಯುತ್ತಿದ್ದಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ, ತಹಶೀಲ್ದಾರ್ ಸೇರಿದಂತೆ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ಕಾಮೇಗೌಡರ ಆರೋಗ್ಯ ವಿಚಾರಿಸಿದ್ದಾರೆ. ಅಲ್ಲದೇ ವೈದ್ಯರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚಿಸಲಾಗಿದೆ.
ಮೂಲತಃ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ದಾಸಮದೊಡ್ಡಿ ಗ್ರಾಮದ ಕುರಿಗಾಹಿ 83 ವರ್ಷದ ಕಾಮೇಗೌಡ ಅವರು 16 ಕೆರೆಗಳನ್ನು ನಿರ್ಮಿಸಿದ್ದಾರೆ. ಅಷ್ಟೇ ಅಲ್ಲದೆ ಎರಡು ಸಾವಿರಕ್ಕೂ ಹೆಚ್ಚು ಗಿಡ ನೆಟ್ಟು ಪರಿಸರ ಪ್ರೇಮ ಮೆರೆದಿದ್ದಾರೆ. ಇತ್ತೀಚೆಗೆ ಪ್ರಧಾನಿ ಮೋದಿ ‘ಮನ್ ಕೀ ಬಾತ್’ ಕಾರ್ಯಕ್ರಮದಲ್ಲಿ ಪರಿಸರ ಪ್ರೇಮಿ, ರಾಜ್ಯೋತ್ಸವ ಪುರಷ್ಕೃತ ಕಾಮೇಗೌಡ ಅವರನ್ನು ಶ್ಲಾಘಿಸಿದ್ದರು.








