ಹಾಸನ: ಮಾಜಿ ಶಾಸಕ ಎ.ಎಸ್. ಬಸವರಾಜ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಇಹಲೋಕ ತ್ಯಜಿಸಿದ್ದಾರೆ.
ಅರಸೀಕೆರೆ (Arsikere) ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎ.ಎಸ್.ಬಸವರಾಜು (75) (A.S Basavaraju) ಅವರು ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಸಾವನ್ನಪ್ಪಿದ್ದಾರೆ.
ಬಸವರಾಜು ಅವರು 2004-2007 ರವರೆಗೆ ಬಿಜೆಪಿಯಿಂದ (BJP) ಶಾಸಕರಾಗಿ ಆಯ್ಕೆಯಾಗಿದ್ದರು. 1999 ರಲ್ಲಿ ಮೊದಲ ಬಾರಿಗೆ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿ, ಕಾಂಗ್ರೆಸ್‍ನ ಜಿ.ವಿ.ಸಿದ್ದಪ್ಪ ವಿರುದ್ಧ ಸೋಲು ಕಂಡಿದ್ದರು. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಆಪ್ತರಾಗಿದ್ದರು.
ಸಂಘ ನಿಷ್ಠರಾಗಿಯೂ ಬಸವರಾಜು ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದರು. ಮೃತರ ನಿಧನಕ್ಕೆ ಹಾಲಿ ಶಾಸಕ ಕೆ.ಎಂ.ಶಿವಲಿಂಗೇಗೌಡ ಹಾಗೂ ವಿವಿಧ ಪಕ್ಷಗಳ ಮುಖಂಡರು ಸಂತಾಪ ಸೂಚಿಸಿದ್ದಾರೆ. ಶುಕ್ರವಾರ ಅರಸೀಕೆರೆಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.








