ತುಮಕೂರು: ಅನಾರೋಗ್ಯದ ಹಿನ್ನೆಲೆಯಲ್ಲಿ ಮಾಜಿ ಸಂಸದ ಸಿ.ಪಿ.ಮೂಡಲಗಿರಿಯಪ್ಪ(85) ಇಹಲೋಕ ತ್ಯಜಿಸಿದ್ದಾರೆ.
ಕೊಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ ಅವರು ನಿಧನರಾಗಿದ್ದಾರೆ. ತೀವ್ರ ಉಸಿರಾಟದ ಸಮಸ್ಯೆ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಚಿರತಹಳ್ಳಿ ಗ್ರಾಮದ ನಿವಾಸಿಯಾಗಿದ್ದ ಮೃತರು, ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಮೂರು ಬಾರಿ ಸಂಸದರಾಗಿದ್ದರು. ಅಲ್ಲದೇ, ಶಿರಾ ಕ್ಷೇತ್ರದ ಶಾಸಕರಾಗಿದ್ದರು. ಅಂತ್ಯಸಂಸ್ಕಾರವು ಮಾ. 24ರಂದು ಬೆಳಿಗ್ಗೆ 10ಕ್ಕೆ ಅವರ ಸ್ವಗೃಹ ಚಿರತಹಳ್ಳಿ ಗ್ರಾಮದ ತೋಟದಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬಸ್ಥರು ಹೇಳಿದ್ದಾರೆ.
1985 ರಲ್ಲಿ ಮೊದಲ ಬಾರಿಗೆ ಕಾಂಗ್ರೆಸ್ ಮೂಲಕ ರಾಜಕೀಯ ಪ್ರವೇಶಿಸಿದ್ದ ಮೂಡಲಗಿರಿಯಪ್ಪ, ಮೊದಲ ಯತ್ನದಲ್ಲಿಯೇ ಶಿರಾ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದರು. ನಂತರ ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಬರೊಬ್ಬರಿ ಮೂರು ಬಾರಿ, ಅಂದರೆ 1989, 1991 ಮತ್ತು 1998 ರಲ್ಲಿ ಗೆಲುವು ಸಾಧಿಸಿದ್ದರು.