ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಆರೋಗ್ಯ ಮತ್ತಷ್ಟು ಗಂಭೀರ
ಹೊಸದಿಲ್ಲಿ, ಅಗಸ್ಟ್ 11: ಕೋವಿಡ್ -19 ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ನವದೆಹಲಿಯ ಸೇನಾ ಸಂಶೋಧನೆ ಮತ್ತು ರೆಫರಲ್ ಆಸ್ಪತ್ರೆಗೆ ದಾಖಲಾದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಆರೋಗ್ಯ ಮತ್ತಷ್ಟು ಗಂಭೀರವಾಗಿದ್ದು, ವೆಂಟಿಲೇಟರ್ ಬೆಂಬಲದಲ್ಲಿ ಅವರ ಚಿಕಿತ್ಸೆ ಮುಂದುವರೆದಿದೆ ಎಂದು ಆಸ್ಪತ್ರೆ ಇಂದು ಬಿಡುಗಡೆ ಮಾಡಿದ ವೈದ್ಯಕೀಯ ಬುಲೆಟಿನ್ ನಲ್ಲಿ ತಿಳಿಸಿದೆ.
ಮುಖರ್ಜಿ ಅವರ ಮೆದುಳಿನಲ್ಲಿ ದೊಡ್ಡ ಪ್ರಮಾಣದ ರಕ್ತ ಹೆಪ್ಪುಗಟ್ಟುವಿಕೆ ಪತ್ತೆಯಾಗಿದ್ದು, ಶಸ್ತ್ರಚಿಕಿತ್ಸೆ ಮೂಲಕ ಅದನ್ನು ತೆಗೆದು ಹಾಕಲಾಗಿದೆ. ಆದರೆ ಶಸ್ತ್ರಚಿಕಿತ್ಸೆ ಬಳಿಕ ಅವರ ಆರೋಗ್ಯದ ಸ್ಥಿತಿ ಗಂಭೀರವಾಗಿದ್ದು, ವೆಂಟಿಲೇಟರ್ ಬೆಂಬಲದೊಂದಿಗೆ ಚಿಕಿತ್ಸೆ ಮುಂದುವರಿದಿದೆ.
ನವದೆಹಲಿಯ ಸೇನಾ ಸಂಶೋಧನೆ ಮತ್ತು ರೆಫರಲ್
ಆಸ್ಪತ್ರೆಯ ವೈದ್ಯಾಧಿಕಾರಿಗಳು ಪ್ರಣಬ್ ಮುಖರ್ಜಿ ಅವರ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಕಾಣುತ್ತಿಲ್ಲ ಎಂದು ಮಾಹಿತಿ ನೀಡಿದ್ದಾರೆ.

ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ಪ್ರಣಬ್ ಮುಖರ್ಜಿ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದು, ರಕ್ಷಣಾ ಸಚಿವ ರಾಜನಾಥ್ ಸಿಂಗ್ ನವದೆಹಲಿಯ ಸೇನಾ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರನ್ನು ಭೇಟಿಯಾಗಿ ಮಾಜಿ ರಾಷ್ಟ್ರಪತಿಗಳ ಆರೋಗ್ಯದ ಬಗ್ಗೆ ವಿಚಾರಿಸಿದ್ದಾರೆ. ಅವರ ಯೋಗಕ್ಷೇಮ ಮತ್ತು ಶೀಘ್ರ ಚೇತರಿಕೆಗಾಗಿ ನಾನು ಪ್ರಾರ್ಥಿಸುತ್ತೇನೆ ಎಂದು ಸಿಂಗ್ ಟ್ವೀಟ್ ಮಾಡಿದ್ದಾರೆ.
ಕಾಂಗ್ರೆಸ್ ಮುಖಂಡರಾದ ರಾಹುಲ್ ಗಾಂಧಿ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೂಡ ಮಾಜಿ ರಾಷ್ಟ್ರಪತಿ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ.
ಮಾಜಿ ರಾಷ್ಟ್ರಪತಿ ಆರೋಗ್ಯದ ಬಗ್ಗೆ ಆತಂಕವಿದೆ ಎಂದು ಬ್ಯಾನರ್ಜಿ ಟ್ವೀಟ್ ಮಾಡಿದ್ದು, ಈ ಸಮಯದಲ್ಲಿ ನನ್ನ ಪ್ರಾರ್ಥನೆಗಳು ಅವರೊಂದಿಗೆ ಮತ್ತು ಅವರ ಕುಟುಂಬದೊಂದಿಗೆ ಇರುತ್ತವೆ ಮತ್ತು ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ನಾನು ಬಯಸುತ್ತೇನೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಟ್ವೀಟ್ ಮಾಡಿದ್ದಾರೆ.








