ಬೆಂಗಳೂರು: ಭೂಸುಧಾರಣೆ, ಎಪಿಎಂಸಿ ಕಾಯ್ದೆ ತಿದ್ದುಪಡಿ ಖಂಡಿಸಿ 32 ರೈತ ಸಂಘಟನೆಗಳು ಇಂದು ಕರೆ ನೀಡಿರುವ ಕರ್ನಾಟಕ ಬಂದ್‍ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಬಿಎಂಟಿಸಿ, ಕೆಎಸ್‍ಆರ್‍ಟಿಸಿ ಬಸ್ ಸಂಚಾರ ವಿರಳವಾಗಿದ್ದು, ಬಹುತೇಕ ಅಂಗಡಿ ಮುಂಗಟ್ಟುಗಳು ಮುಚ್ಚಿ ಕರ್ನಾಟಕ ಬಂದ್‍ಗೆ ಬೆಂಬಲ ನೀಡಲಾಗಿದೆ.
ಕೆ.ಆರ್ ಮಾರುಕಟ್ಟೆ, ಯಶವಂತಪುರದ ಎಪಿಎಂಸಿ ಮಾರುಕಟ್ಟೆ ಮುಚ್ಚದೇ ಇದ್ದರೂ ರೈತರು, ವ್ಯಾಪಾರಿಗಳಿಲ್ಲದೆ ಖಾಲಿ ಹೊಡೆಯುತ್ತಿವೆ. ಕೆ.ಆರ್ ಮಾರುಕಟ್ಟೆಯಲ್ಲಿ ವ್ಯಾಪಾರ ಬಂದ್ ಮಾಡಿಸಲು ಮುಂದಾದ ಕನ್ನಡಪರ ಸಂಘಟನೆಗಳ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೆಂಗಳೂರು ನಗರದಲ್ಲಿ ಬಂದ್‍ನ ವಾತಾವರಣ ಕಂಡು ಬರುತ್ತಿದ್ದು, ವಾಹನ ಸಂಚಾರ ವಿರಳವಾಗಿದೆ.
ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಟಿ.ಎ ನಾರಾಯಣಗೌಡ ನೇತೃತ್ವದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬೆಳ್ಳಂ ಬೆಳಿಗ್ಗೆ ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ರೈಲು ತಡೆಗೆ ಮುಂದಾದರು. ರೈಲು ನಿಲ್ದಾಣಕ್ಕೆ ನುಗ್ಗಲು ಯತ್ನಿಸುತ್ತಿದ್ದಂತೆ ನಾರಾಯಣಗೌಡ ಸೇರಿದಂತೆ ಹಲವು ಕರವೇ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಸಿಲಿಕಾನ್ ಸಿಟಿಯಲ್ಲಿ ಖಾಕಿ ಸರ್ಪಗಾವಲು ಹಾಕಲಾಗಿದೆ.
10ಗಂಟೆ ನಂತರ ವಿವಿಧ ರೈತಪರ, ಕನ್ನಡಪರ ಸೇರಿದಂತೆ ಹಲವು ಸಂಘಟನೆಗಳು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲಿದ್ದು, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಿದ್ದಾರೆ.
ರಾಜ್ಯಾದ್ಯಂತ ಬಹುತೇಕ ಜಿಲ್ಲಾ ಕೇಂದ್ರಗಳಲ್ಲೂ ಕರ್ನಾಟಕ ಬಂದ್‍ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮಂಡ್ಯ, ಮೈಸೂರು, ಧಾರವಾಡ, ದಾವಣಗೆರೆ, ಗದಗ, ಬಾಗಲಕೋಟೆ, ಕಲಬುರಗಿ, ಚಾಮರಾಜನಗರ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಬಂದ್‍ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಜಿಲ್ಲಾ ಕೇಂದ್ರಗಳಲ್ಲಿ ವಿವಿಧ ಸಂಘಟನೆಗಳ ಕಾರ್ಯಕರ್ತರು ಟೈರ್‍ಗಳಿಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸುತ್ತಿದ್ದಾರೆ. ಮಂಡ್ಯದಲ್ಲಿ ರೈತರು ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಹಾಡು ಹೇಳಿ ಆಕ್ರೋಶ ವ್ಯಕ್ತಪಡಿಸಿದರೆ, ರಸ್ತೆಯಲ್ಲಿ ಉರುಳು ಸೇವೆ ಮಾಡಿ ರೈತ ವಿರೋಧಿ ಕಾಯ್ದೆಗಳನ್ನು ವಾಪಸ್ ಪಡೆಯುವಂತೆ ಆಗ್ರಹಿಸಿದರು.
ಹೀಗಾಗಿ ಮಂಡ್ಯ, ಧಾರವಾಡ, ಮೈಸೂರು, ಗದಗ ಬಹುತೇಕ ಜಿಲ್ಲೆಗಳಲ್ಲಿ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ.
ಕರ್ನಾಟಕ ಬಂದ್‍ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಇಂದು ನಡೆಯಬೇಕಿದ್ದ ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆಯನ್ನು ಮುಂದೂಡಲಾಗಿದೆ.
KSRLPSನಲ್ಲಿ ಉದ್ಯೋಗಾವಕಾಶಗಳು – ಈಗಲೇ ಅರ್ಜಿ ಸಲ್ಲಿಸಿ!
ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಚಾರ ಸಂಘ (KSRLPS) ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ಸಂಘವು ಗ್ರಾಮೀಣ ಭಾಗದ ಜೀವನೋಪಾಯವನ್ನು ಬೆಂಬಲಿಸಲು ಹಾಗೂ ಅಭಿವೃದ್ಧಿಗೆ ಕೈಗೊಂಡಿರುವ...