ಬೆಂಗಳೂರು : ಬಿಪಿಎಲ್ ಕಾರ್ಡ್ ಹೊಂದಿರುವ ಸರ್ಕಾರಿ ನೌಕರರು, ಟ್ರ್ಯಾಕ್ಟರ್ ಹಾಗೂ ಇತರೆ ವಾಹನ ಹೊಂದಿರುವವರು ತಮ್ಮ ಕಾರ್ಡುಗಳನ್ನು ಕೂಡಲೇ ಹಿಂತಿರುಗಿಸಿ, ರದ್ದುಪಡಿಸಿಕೊಳ್ಳಬೇಕು. ಇಲ್ಲವಾದಲ್ಲಿ ಕಾನೂನು ಪ್ರಕಾರ ಕಠಿಣ ಕ್ರಮ ತೆಗೆದುಕೊಳ್ಳಿ ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಖಡಕ್ ಸೂಚನೆ ನೀಡಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಬಿಎಸ್ವೈ, ಅರ್ಹ ಫಲಾನುಭವಿಗಳಿಗೆ ಪಡಿತರ ಸೌಲಭ್ಯ ಸಮರ್ಪಕವಾಗಿ ಸಿಗಬೇಕು. ಅನರ್ಹರು ಈ ಸೌಲಭ್ಯ ದುರುಪಯೋಗ ಪಡಿಸಿಕೊಳ್ಳದಂತೆ ಕಠಿಣ ಕ್ರಮ ಕೈಗೊಳ್ಳಬೇಕು .
ಕೋವಿಡ್ ಪ್ರಾರಂಭಕ್ಕೆ ಮೊದಲು 63 ಸಾವಿರ ಪಡಿತರ ಕಾರ್ಡುಗಳನ್ನು ರದ್ದುಪಡಿಸಲಾಗಿತ್ತು. ಈಗ ಮತ್ತೆ ಅನರ್ಹ ಮತ್ತು ನಕಲಿ ಪಡಿತರ ಚೀಟಿಗಳನ್ನು ರದ್ದುಪಡಿಸಲು ಅಭಿಯಾನ ನಡೆಸಲು ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಆ ಮೂಲಕ ರಾಜ್ಯದ ಬೊಕ್ಕಸಕ್ಕೆ ಆಗುವ ಆರ್ಥಿಕ ಹೊರೆ ಕಡಿಮೆ ಮಾಡಲು ಈ ಅಭಿಯಾನ ನೆರವಾಗಲಿದೆ ಎಂದರು.
ಆಹಾರ ಮತ್ತು ನಾಗರಿಕರ ಸರಬರಾಜು ನಿಗಮಕ್ಕೆ ಬೆಂಬಲ ಬೆಲೆ ಯೋಜನೆಯಡಿ ಬೆಳೆ ಖರೀದಿಗೆ ರೈತರಿಗೆ ಹಣ ಪಾವತಿಸಲು ಬಾಕಿ ಇರುವ 240 ಕೋಟಿ ರೂ, ಆವರ್ತ ನಿಧಿಯಿಂದ ಬಿಡುಗಡೆಗೆ ಕ್ರಮ ಕೈಗೊಳ್ಳಬಹುದು.
ಕೋವಿಡ್ ಹಿನ್ನೆಲೆಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ಕೇಂದ್ರ ಹಾಗೂ ಸರ್ಕಾರದಿಂದ ಪಡಿತರ ವಿತರಣೆ ಮಾಡಲಾಗಿದೆ. ಶೇ. 95ರಷ್ಟು ಪಡಿತರ ಚೀಟಿದಾರರು ಪಡಿತರ ಪಡೆದುಕೊಂಡಿದ್ದಾರೆ. ಮುಖ್ಯಮಂತ್ರಿಗಳ ಅನಿಲ ಭಾಗ್ಯ ಯೋಜನೆ ಅಡಿ 98,079 ಫಲಾನುಭವಿಗಳಿಗೆ 3 ಅನಿಲ ಸಿಲಿಂಡರ್ಗಳನ್ನು ಉಚಿತವಾಗಿ ವಿತರಿಸಲು ಕ್ರಮ ವಹಿಸಲಾಗಿದೆ.
ನಿಗಮದ 53 ಗೋದಾಮುಗಳು ಶಿಥಿಲಾವಸ್ಥೆಯಲ್ಲಿವೆ. 42 ಖಾಲಿ ನಿವೇಶನಗಳು ನಿಗಮದ ಒಡೆತನದಲ್ಲಿವೆ. ಈ ಸ್ಥಳಗಳಲ್ಲಿ ಅತ್ಯಾಧುನಿಕ ಸೌಲಭ್ಯಗಳಿರುವ ಸಾವಿರ ಮೆಟ್ರಿಕ್ ಟನ್ ಸಾಮರ್ಥದ 95 ಗೋದಾಮುಗಳನ್ನು ಪಿಪಿಪಿ ಮಾದರಿಯಲ್ಲಿ ನಿರ್ಮಿಸುವ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದ್ದಾರೆ.
ಸಭೆಯಲ್ಲಿ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ ಗೋಪಾಲಯ್ಯ, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ ಎಂ ವಿಜಯಭಾಸ್ಕರ್, ಆಹಾರ ಇಲಾಖೆ ಪ್ರಧಾನ ಕಾರ್ಯದರ್ಶಿ ಎನ್ ಮಂಜುನಾಥ ಪ್ರಸಾದ್ ಮತ್ತು ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.