ಬೆಂಗಳೂರು : ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರಿಗೆ ಜಾತಿ ಪ್ರಮಾಣ ಪತ್ರ ನೀಡಲು ಸರ್ಕಾರ ಆದೇಶ ಹೊರಡಿಸಿದೆ.
ಈ ಬಗ್ಗೆ ಡಿಸಿಎಂ ಗೋವಿಂದ ಕಾರಜೋಳ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು,ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರಿಗೆ ಶಿಕ್ಷಣ, ಉದ್ಯೋಗ, ಕೌಶಲ್ಯ ಅಭಿವೃದ್ಧಿ, ಸ್ವಯಂ ಉದ್ಯೋಗ ಹಾಗೂ ಇತರೆ ಸೌಲಭ್ಯಗಳನ್ನು ಪಡೆಯಲು ಅನುಕೂಲವಾಗುವಂತೆ ಜಾತಿ ಹಾಗೂ ಆದಾಯ ಪ್ರಮಾಣ ಪತ್ರವನ್ನು ನೀಡಲು ಸರ್ಕಾರಿ ಆದೇಶ ಹೊರಡಿಸುವ ಮೂಲಕ ನಮ್ಮ ಸರ್ಕಾರ ನುಡಿದಂತೆ ನಡೆದಿದೆ ಎಂದು ತಿಳಿಸಿದ್ದಾರೆ.
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದವರಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇ. 10ರಷ್ಟು ಮೀಸಲಾತಿಯನ್ನು ಕಲ್ಪಿಸಿ ಆದೇಶ ಹೊರಡಿಸಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದ ನಮ್ಮ ರಾಜ್ಯ ಸರ್ಕಾರವು ಕರ್ನಾಟಕ ರಾಜ್ಯದಲ್ಲಿ ಕೇಂದ್ರ ಸರ್ಕಾರದ ಈ ಆದೇಶದ ಅನುಷ್ಟಾನಕ್ಕಾಗಿ ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ನೀಡಲು ಸರ್ಕಾರಿ ಆದೇಶ ಹೊರಡಿಸಿದೆ. ಆರ್ಥಿಕವಾಗಿ ಹಿಂದುಳಿದ ಎಲ್ಲಾ ವರ್ಗಗಳ ಕಲ್ಯಾಣ ನಮ್ಮ ಸರ್ಕಾರದ ಉದ್ದೇಶವಾಗಿದೆ ಎಂದು ಪತ್ರಿಕಾ ಹೇಳಿಕೆ ಮೂಲಕ ತಿಳಿಸಿದ್ದಾರೆ.
ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರಿಗೆ ಶಿಕ್ಷಣ, ಕೌಶಲ್ಯ ಅಭಿವೃದ್ಧಿ, ಸ್ವಯಂ ಉದ್ಯೋಗ ಹಾಗೂ ಇತರೆ ಸೌಕರ್ಯಗಳನ್ನೊಳಗೊಂಡAತೆ ಯೋಜನೆಗಳನ್ನು ಜಾರಿಗೊಳಿಸುವ ಉದ್ದೇಶಕ್ಕಾಗಿ ರಾಜ್ಯ ಸರ್ಕಾರವು ಬ್ರಾಹ್ಮಣ ಅಭಿವೃದ್ಧಿ ಮಂಡಳಿಯನ್ನು ಸ್ಥಾಪಿಸಿದೆ. ಆರ್ಥಿಕವಾಗಿ ಹಿಂದುಳಿದ ಅರ್ಹ ಬ್ರಾಹ್ಮಣರಿಗೆ ಸೂಕ್ತ ಜಾತಿ ಹಾಗೂ ಆದಾಯ ಪ್ರಮಾಣ ಪತ್ರವನ್ನು ನೀಡಲು ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಕಂದಾಯ ಇಲಾಖೆಯು ಆದೇಶ ಹೊರಡಿಸಿದೆ.
ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ವಿವಿಧ ಯೋಜನೆಗಳಿಗೆ ಫಲಾನುಭವಿಗಳನ್ನು ಆಯ್ಕೆ ಮಾಡುವ ಸಂದರ್ಭದಲ್ಲಿ ಈ ಪ್ರಮಾಣ ಪತ್ರಗಳನ್ನು ಪರಿಗಣಿಸಲು ಅನುಮತಿ ನೀಡಲಾಗಿದೆ. ಅರ್ಹ ಫಲಾನುಭವಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಡಿಸಿಎಂ ತಿಳಿಸಿದ್ದಾರೆ.








