ಬೆಂಗಳೂರು : ಗ್ರಾಮ ಪಂಚಾಯಿತಿ ಚುನಾವಣೆ ಮುಂದಕ್ಕೆ ಹೋದ ಬಗ್ಗೆ ರಾಜ್ಯ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದು, ಅವಧಿ ಮುಗಿಯುತ್ತಿರುವ ಗ್ರಾಮ ಪಂಚಾಯಿತಿಗಳ ಚುನಾವಣೆಯನ್ನು ಸರ್ಕಾರ ಕೊರೊನಾ ನೆಪ ಒಡ್ಡಿ ಮುಂದೂಡಲು ಹುನ್ನಾರ ನಡೆಸಿದೆ ಎಂದು ಆರೋಪಿಸಿದ್ದಾರೆ.
ಇಂದು ವಿಪಕ್ಷ ನಾಯಕ ಸಿದ್ದರಾಮಯ್ಯ ರಾಜ್ಯ ಚುನಾವಣಾ ಆಯುಕ್ತ ಡಾ.ಬಿ.ಬಸವರಾಜು ಅವರನ್ನು ಭೇಟಿ ಮಾಡಿ ಗ್ರಾಮ ಪಂಚಾಯಿತಿಗಳ ಚುನಾವಣೆ ನಡೆಸುವಂತೆ ಮನವಿ ಮಾಡಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದರು. ಪಂಚಾಯಿತಿಗಳಿಗೆ ನಿಗದಿತ ಅವಧಿಯಲ್ಲಿ ಚುನಾವಣೆ ನಡೆಯದಿದ್ದರೆ ಅದು ಸಂವಿಧಾನದ ಆಶಯಗಳ ಉಲ್ಲಂಘನೆಯಾಗುತ್ತದೆ. ಸ್ವತಂತ್ರ ಸಂಸ್ಥೆಯಾದ ರಾಜ್ಯ ಚುನಾವಣಾ ಆಯೋಗ ಈಗಾಗಲೇ ಚುನಾವಣೆ ಪ್ರಕ್ರಿಯೆ ಆರಂಭಿಸಬೇಕಿತ್ತು. ಆದರೆ ಅದರ ಮೇಲೆ ರಾಜ್ಯ ಸರ್ಕಾರ ಪ್ರಭಾವ ಬೀರುವ ಪ್ರಯತ್ನ ಮಾಡಿದೆ ಎಂದು ಸಿದ್ದರಾಮಯ್ಯ ಆರೋಪಿಸಿದರು.
ಇದೇ ವೇಳೆ ಈಶ್ವರಪ್ಪ ಅವರ ಆಡಳಿತ ಸಮಿತಿ ರಚಿಸುವ ಹೇಳಿಕೆ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ, ಸಚಿವ ಈಶ್ವರಪ್ಪ ಅವರು ಹೊಸದಾಗಿ ಆಡಳಿತ ಸಮಿತಿ ರಚಿಸುವ ಹೇಳಿಕೆ ನೀಡುತ್ತಲೇ ಇದ್ದಾರೆ. ಇದಕ್ಕೆ ಅವಕಾಶ ಇಲ್ಲ. ಆಯೋಗ ತಕ್ಷಣ ಚುನಾವಣೆ ಪ್ರಕ್ರಿಯೆ ಆರಂಭಿಸಬೇಕು ಎಂದು ಒತ್ತಾಯಿಸಿದರು.
ಆಯುಕ್ತರನ್ನು ಭೇಟಿ ಮಾಡಿ ‘ಚುನಾವಣೆ ನಡೆಸಲೇಬೇಕು ಎಂದು ನಾವು ಒತ್ತಾಯ ಮಾಡಿದ್ದೇವೆ. ಕಾನೂನು ಪ್ರಕಾರ ಕ್ರಮ ಕೈಗೊಳ್ಳುವುದಾಗಿ ಆಯುಕ್ತರು ಭರವಸೆ ನೀಡಿದ್ದಾರೆ’ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.