ಬೆಂಗಳೂರು: ರೈತರ ಆದಾಯವನ್ನು ದ್ವಿಗುಣಗೊಳಿಸುವ ಪ್ರಧಾನಿ ನರೇಂದ್ರ ಮೋದಿ ಅವರ ಆಶಯವನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಪೂರಕ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ಬಾಗಲಕೋಟೆ ತೋಟಗಾರಿಕಾ ವಿಶ್ವವಿದ್ಯಾಲಯವು ಹಮ್ಮಿಕೊಂಡಿರುವ ತೋಟಗಾರಿಕಾ ಮೇಳವನ್ನು ಆನ್‍ಲೈನ್ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಸಿಎಫ್‍ಟಿಆರ್‍ಐ ಹಾಗೂ ಭಾರತೀಯ ತೋಟಗಾರಿಕಾ ಸಂಸ್ಥೆಯ ಸಹಭಾಗಿತ್ವದೊಂದಿಗೆ ತೋಟಗಾರಿಕಾ ಉತ್ಪನ್ನಗಳ ಮೌಲ್ಯವರ್ಧನೆ, ಸಂಸ್ಕರಣೆ, ದಾಸ್ತಾನು ಮತ್ತು ಪ್ಯಾಕೇಜಿಂಗ್‍ಗಳ ಬಗ್ಗೆ ಹೊಸ ತಂತ್ರಜ್ಞಾನಗಳನ್ನು ಪರಿಚಯಿಸಲು ಉದ್ದೇಶಿಸಲಾಗಿದೆ. ಒಟ್ಟಾರೆ ತೋಟಗಾರಿಕೆಯನ್ನು ಉದ್ದಿಮೆಯಾಗಿ ಪರಿಗಣಿಸಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಸರ್ಕಾರ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಪ್ರಧಾನ ಮಂತ್ರಿಗಳು 100ನೇ ಕಿಸಾನ್ ರೈಲಿಗೆ ಇತ್ತೀಚೆಗಷ್ಟೇ ಚಾಲನೆ ನೀಡಿದ್ದಾರೆ. ಮೂರು ತಿಂಗಳ ಅವಧಿಯಲ್ಲಿ ಕಿಸಾನ್ ರೈಲುಗಳ ಮೂಲಕ 27 ಸಾವಿರ ಟನ್ ಕೃಷಿ ಉತ್ಪನ್ನಗಳನ್ನು ಸಾಗಿಸಲಾಗಿದೆ. ಶೀಘ್ರವಾಗಿ ಕೊಳೆತು ಹೋಗಬಹುದಾದ ದಾಳಿಂಬೆ, ಕಿತ್ತಳೆ ಹಾಗೂ ಇತರ ತೋಟಗಾರಿಕಾ ಬೆಳೆಗಳನ್ನು ಇತರ ರಾಜ್ಯಗಳಿಗೆ ಸಾಗಿಸಲು ಕೃಷಿ ರೈಲ್ ಯೋಜನೆಯ ಸೌಲಭ್ಯವನ್ನು ಬಳಸಿಕೊಳ್ಳಲಾಗುವುದು ಎಂದರು.
ತೋಟಗಾರಿಕಾ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕ ರಾಜ್ಯವು ತನ್ನ ಸ್ಥಾನವನ್ನು ಕಾಯ್ದುಕೊಂಡು ಇನ್ನೂ ಹೆಚ್ಚಿನ ಸಾಧನೆ ಮಾಡಲು ಪೂರಕ ಸಂಶೋಧನೆ, ವಿಸ್ತರಣೆ ಹಾಗೂ ಇತರ ಮೂಲಕಸೌಕರ್ಯ ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ಅವರು ನುಡಿದರು.
ಡಿಸಿಎಂ ಗೋವಿಂದ ಎಂ. ಕಾರಜೋಳ ಮಾತನಾಡಿ, 2008ರಲ್ಲಿ ಸಿಎಂ ಯಡಿಯೂರಪ್ಪ ಅವರೇ ಈ ತೋಟಗಾರಿಕೆ ವಿಶ್ವವಿದ್ಯಾಲಯವನ್ನು ಪ್ರಾರಂಭಿಸಿದರು. ಇದರಿಂದ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಅದರಲ್ಲೂ ಬಾಗಲಕೋಟೆ ವಿಜಯಪುರ ಅವಳಿ ಜಿಲ್ಲೆಗಳ ತೋಟಗಾರಿಕೆ ಬೆಳೆಗಳ ವಿಸ್ತರಣೆ, ಸಂಶೋಧನೆ, ತರಬೇತಿಗೆ ನೆರವಾಗಿದೆ. ರೈತ ಕುಟುಂಬದಿಂದ ಬಂದ ರೈತರ ಧ್ವನಿಯಾಗಿ ರೂಪುಗೊಂಡಿರುವ ಯಡಿಯೂರಪ್ಪ ಅವರು, ರೈತರ ಶ್ರೇಯೋಭಿವೃದ್ದಿಗಾಗಿ ಶ್ರಮಿಸುತ್ತಿದ್ದಾರೆ. ರೈತರ ಹಿತ ಕಾಪಾಡಲು ಕಂಕಣ ಬದ್ದರಾಗಿದ್ದಾರೆ ಎಂದರು.
ತೋಟಗಾರಿಕಾ ಪ್ರದೇಶ ವಿಸ್ತರಣೆಯಾಗುತ್ತಿರುವುದು ರೈತರಿಗೆ ತೋಟಗಾರಿಕೆ ಲಾಭದಾಯಕ ಎಂಬುದಕ್ಕೆ ನಿದರ್ಶನ. ವಿಜ್ಞಾನಿಗಳು ರೈತರಿಗೆ ಇನ್ನೂ ಹೆಚ್ಚು ಹೆಚ್ಚು ಲಾಭ ತರುವ ತಳಿಗಳನ್ನು ಸಂಶೋಧಿಸಿ, ರೈತರ ಬದುಕು ಹಸನುಗೊಳಿಸಬೇಕು. ರೈತರು ಇದರ ಸದುಪಯೋಗ ಪಡೆದು ಮಾದರಿ ರೈತರಾಗಬೇಕು. ಈ ನಿಟ್ಟಿನಲ್ಲಿ ತೋಟಗಾರಿಕಾ ವಿವಿಯು ರೈತರಿಗೆ ಹಮ್ಮಿಕೊಳ್ಳುತ್ತಿರುವ ತರಬೇತಿ ಕಾರ್ಯಕ್ರಮಗಳ ಕುರಿತು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
ತೋಟಗಾರಿಕೆ ಸಚಿವ ನಾರಾಯಣಗೌಡ ಮಾತನಾಡಿ, ರಾಜ್ಯದಲ್ಲಿ ತೋಟಗಾರಿಕೆ ಉತ್ತೇಜನಕ್ಕೆ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ. ತೋಟಗಾರಿಕೆ ಉತ್ಪನ್ನಗಳ ರಫ್ತು ಪ್ರಮಾಣ ಶೇ.2.5 ರಿಂದ ಶೇ. 5ಕ್ಕೇರಿದೆ. ಮುಂದಿನ ದಿನಗಳಲ್ಲಿ ಇದನ್ನು ಇನ್ನಷ್ಟು ಹೆಚ್ಚಿಸಲು ರೈತರಿಗೆ ಅಗತ್ಯ ಬೆಂಬಲ ನೀಡಲಾಗುವುದು ಎಂದು ತಿಳಿಸಿದರು.
ಬಾಗಲಕೋಟೆ ಶಾಸಕ ಡಾ. ವೀರಣ್ಣ ಚರಂತಿ ಮಠ ಅಧ್ಯಕ್ಷತೆ ವಹಿಸಿದ್ದರೆ, ಪರಿಷತ್ ವಿಪಕ್ಷದ ನಾಯಕ ಎಸ್. ಆರ್. ಪಾಟೀಲ, ತೋಟಗಾರಿಕಾ ವಿವಿಯ ಕುಲಪತಿ ಡಾ. ಇಂದ್ರೇಶ್ ಮತ್ತು ಇತರರು ಉಪಸ್ಥಿತರಿದ್ದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel