ಹೊರ ರಾಜ್ಯಗಳ ಕನ್ನಡಿಗ ವಿದ್ಯಾರ್ಥಿಗಳಿಗೆ ಕರ್ನಾಟರ ರಾಜ್ಯ ಸರ್ಕಾರಿ ಸೌಲಭ್ಯಗಳು ಸಿಗುವಂತೆ ಮಾಡಲು ತೆಗೆದುಕೊಳ್ಳಬಹುದಾದ ಕ್ರಮಗಳನ್ನು ಪರಿಶೀಲಿಸಿ ವರದಿ ನೀಡುವಂತೆ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಹೊರ ರಾಜ್ಯಗಳಲ್ಲಿ ಕನ್ನಡ ಮಾಧ್ಯಮದಲ್ಲಿ ಕಲಿತ ಗಡಿನಾಡು, ಹೊರ ರಾಜ್ಯಗಳ ಕನ್ನಡಿಗ ವಿದ್ಯಾರ್ಥಿಗಳು ರಾಜ್ಯದಲ್ಲಿ ಉನ್ನತ ಶಿಕ್ಷಣ, ಉದ್ಯೋಗ ಸೇರಿದಂತೆ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ. ಕನ್ನಡಿಗ ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿಗೆ ಸೌಲಭ್ಯಗಳು ಮತ್ತು ಅವುಗಳನ್ನು ಸುಗಮವಾಗಿ ದೊರಕುವಂತೆ ಮಾಡಲು ವಹಿಸಬಹುದಾದ ಕ್ರಮಗಳ ಕುರಿತು ಮಾಹಿತಿ ನೀಡುವಂತೆ ಇದೇ 26ರಂದು ಮುಖ್ಯಮಂತ್ರಿ ನಿರ್ದೇಶನ ನೀಡಿದ್ದಾರೆ.
ಸಿಎಂ ಸೂಚನೆಯಂತೆ ವರದಿ ನೀಡಲು ಉನ್ನತ ಶಿಕ್ಷಣ, ಶಾಲಾ ಶಿಕ್ಷಣ ಹಾಗೂ ಸಾಕ್ಷರತೆ, ಸಮಾಜ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಆರ್ಥಿಕ ಮತ್ತು ಸಾಂಖ್ಯಿಕ ಇಲಾಖೆಯ ಮುಖ್ಯಸ್ಥರಿಗೆ ಮುಖ್ಯ ಕಾರ್ಯದರ್ಶಿ ತಿಳಿಸಿದ್ದಾರೆ.








