ರಾಯಚೂರು: ಹೆಮ್ಮಾರಿ ಕೊರೊನಾ ಸೋಂಕು ಹರಡುವುದನ್ನು ತಡೆಯಲು ದೇಶಾದ್ಯಂತ ಮಾಡಲಾದ ಲಾಕ್‍ಡೌನ್ ಲಕ್ಷಾಂತರ ಜನರ ಉದ್ಯೋಗ ಕಸಿದುಕೊಂಡಿದೆ. ಸಾವಿರಾರು ಜನರು ಆರ್ಥಿಕ ಸಂಕಷ್ಟದಿಂದ ನಲುಗಿ ಬೀದಿಗೆ ಬಿದ್ದಿದ್ದಾರೆ.
ಇವರ ಸಾಲಿಗೆ ಸೇರಿದ್ದಾರೆ ರಾಯಚೂರಿನ ರಾಯಚೂರು ಜಿಲ್ಲೆಯ ಮಸ್ಕಿಯ ಸರ್ಕಾರಿ ಪದವಿ ಕಾಲೇಜಿನ ಅತಿಥಿ ಉಪನ್ಯಾಸಕ ವೀರನಗೌಡ.
ಮೂಲತಃ ದೇವದುರ್ಗ ತಾಲೂಕಿನ ಹುಲಿಗುಡ್ಡ ಗ್ರಾಮದ ನಿವಾಸಿಯಾದ ವೀರನಗೌಡ, ಕಳೆದ 9 ವರ್ಷಗಳಿಂದ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಎಂಎ, ಬಿಎಡ್ ಮಾಡಿ, ಸರ್ಕಾರಿ ಪದವಿ ಕಾಲೇಜು ಮಸ್ಕಿಯಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದು, ಲಾಕ್‍ಡೌನ್ ಇವರ ದುಡಿಮೆಗೆ ಕಲ್ಲು ಹಾಕಿದೆ.
ಲಾಕ್‍ಡೌನ್ ನಂತರ ರಾಜ್ಯ ಸರ್ಕಾರ ಅತಿಥಿ ಉಪನ್ಯಾಸಕರಿಗೆ ವೇತನವನ್ನೇ ಬಿಡುಗಡೆ ಮಾಡಿಲ್ಲ. ಹೀಗಾಗಿ ಜೀವನ ನಿರ್ವಹಣೆ ಹಾಗೂ ಕುಟುಂಬ ನಿರ್ವಹಣೆಗೆ ಹಣವಿಲ್ಲದೆ ಎಷ್ಟೋ ಅತಿಥಿ ಉಪನ್ಯಾಸಕರು ಕೂಲಿ ಕೆಲಸ ಮಾಡುತ್ತಿದ್ದಾರೆ.
ಇಬ್ಬರು ಮಕ್ಕಳಿರುವ ಕೂಡು ಕುಟುಂಬದ ವೀರನಗೌಡ, ಆರ್ಥಿಕ ಸಂಕಷ್ಟ ನಿಭಾಯಿಸಲು ನಿತ್ಯ 200ರೂ.ಗೆ ದಿನಕೂಲಿಯಂತೆ ಕುರಿ ಮೇಯಿಸಲು ಹೋಗುತ್ತಿದ್ದಾರೆ. ಕಾಲೇಜು ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡುತ್ತಿದ್ದ ಉಪನ್ಯಾಸಕನೀಗ ಆರ್ಥಿಕ ಸಂಕಷ್ಟ ನಿಭಾಯಿಸಲು ಕಾಡುಮೇಡು ಅಲೆದು ಕುರಿ ಕಾಯುವ ಸ್ಥಿತಿ ನಿರ್ಮಾಣವಾಗಿದೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೆಚ್.ಡಿ ಕುಮಾರಸ್ವಾಮಿ ಅವರು ಅತಿಥಿ ಉಪನ್ಯಾಸಕರಿಗೆ ವೇತನ ಬಿಡುಗಡೆ ಮಾಡುವಂತೆ ಹಲವು ತಿಂಗಳಿಂದ ರಾಜ್ಯ ಸರ್ಕಾರದ ಮೇಲೆ ಒತ್ತಡ ಹಾಕುತ್ತಿದ್ದಾರೆ. ಆದರೆ, ಕೊರೊನಾ ಹಾಗೂ ಲಾಕ್‍ಡೌನ್‍ನಿಂದಾಗಿ ಸರ್ಕಾರದ ಬೊಕ್ಕಸ ಖಾಲಿಯಾಗಿರುವ ಕಾರಣ ಕಳೆದ 6 ತಿಂಗಳಿಂದ ಅತಿಥಿ ಉಪನ್ಯಾಸಕರ ವೇತನ ಇನ್ನೂ ಬಿಡುಗಡೆಯಾಗಿಲ್ಲ.
ಕಳೆದ ತಿಂಗಳು ನಡೆದ ವಿಧಾನ ಮಂಡಲ ಅಧಿವೇಶನದಲ್ಲಿ ಅತಿಥಿ ಉಪನ್ಯಾಸಕರ ವೇತನ ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿಗಳು ಸದನದಲ್ಲಿ ಭರವಸೆ ನೀಡಿದ್ದರು. ಆದರೆ, ಭರವಸೆ ಕೇವಲ ಹೇಳಿಕೆಯಾಗಿ ಮಾತ್ರ ಉಳಿದಿದ್ದು, ಇನ್ನೂ ಕಾರ್ಯರೂಪಕ್ಕೆ ಬಂದಿಲ್ಲ.
ಇದಾದ ನಂತರ ಸಿದ್ದರಾಮಯ್ಯ ಅತಿಥಿ ಉಪನ್ಯಾಸಕರ ವೇತನ ಬಿಡುಗಡೆ ವಿಚಾರ ಪ್ರಸ್ತಾಪಿಸುತ್ತಲೇ ಬಂದಿದ್ದಾರೆ. ಆದರೂ ಸರ್ಕಾರ ಮಾತ್ರ ಮೌನಕ್ಕೆ ಶರಣಾಗಿದೆ. ನಮಗೆ ಜೀವನ ನಿರ್ವಹಣೆ ತುಂಬಾ ಕಷ್ಟಕರವಾಗಿದ್ದು, ರಾಜ್ಯ ಸರ್ಕಾರ ಶೀಘ್ರವೇ ಅತಿಥಿ ಉಪನ್ಯಾಸಕರ ವೇತನ ಬಿಡುಗಡೆ ಮಾಡುವಂತೆ ವೀರನಗೌಡ ಆಗ್ರಹಿಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel