ಭೋಪಾಲ್: ವ್ಯಕ್ತಿಯೊಬ್ಬ ಮದುವೆಯಾಗುವುದಾಗಿ ನಂಬಿಸಿ, ಮದ್ಯ ಕುಡಿಸಿ ರಸ್ತೆಯಲ್ಲೇ ಅತ್ಯಾಚಾರ ನಡೆಸಿರುವ ಘಟನೆ ಮಧ್ಯಪ್ರದೇಶದ (Madhya Pradesh) ಉಜ್ಜಯಿನಿಯಲ್ಲಿ (Ujjain) ನಡೆದಿದೆ.
ರಸ್ತೆಯಲ್ಲೇ ದುರುಳನೊಬ್ಬ ಮಹಿಳೆಯ ಮೇಲೆ ಅತ್ಯಾಚಾರ ನಡೆಸುತ್ತಿರುವ ದೃಶ್ಯದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಘಟನೆಗೆ ಭಾರೀ ಆಕ್ರೋಶ ವ್ಯಕ್ತವಾಗಿದೆ. ಲೈಂಗಿಕ ದೌರ್ಜನ್ಯ ಎಸಗುವುದಕ್ಕೂ ಮುನ್ನ ಆ ವ್ಯಕ್ತಿ ಮದ್ಯ ಸೇವಿಸಿದ್ದ ಎನ್ನಲಾಗಿದೆ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮಹಿಳೆಯನ್ನು ಮದುವೆಯಾಗುವುದಾಗಿ ಭರವಸೆ ನೀಡಿ ಮದ್ಯ ನೀಡಿ ಅತ್ಯಾಚಾರ ಎಸಗಿದ್ದಾನೆ. ನಂತರ ಸ್ಥಳದಿಂದ ಪರಾರಿಯಾಗಿದ್ದ. ಲೈಂಗಿಕ ದೌರ್ಜನ್ಯದ ಕುರಿತು ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ. ಆದರೆ, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದಂತೆ ಅಪರಾಧದ ಬಗ್ಗೆ ತಿಳಿದು ಬಂದಿದ್ದು, ವ್ಯಕ್ತಿಯನ್ನು ಪತ್ತೆ ಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ.