ಬೆಂಗಳೂರು: ಬರೋಬ್ಬರಿ 10 ತಿಂಗಳ ಬಳಿಕ ರಾಜ್ಯದಲ್ಲಿ ಶಾಲೆ ಹಾಗೂ ಪಿಯು ಕಾಲೇಜುಗಳ ಆರಂಭಕ್ಕೆ ಆರೋಗ್ಯ ಇಲಾಖೆ ಗ್ರೀನ್ ಸಿಗ್ನಲ್ ಕೊಟ್ಟಿದೆ.
ಜನವರಿ 1ರಿಂದ ಶಾಲೆ ಹಾಗೂ ಪಿಯು ಕಾಲೇಜುಗಳನ್ನು ಆರಂಭಿಸಬಹುದು ಎಂದ ತಾಂತ್ರಿಕ ಸಲಹಾ ಸಮಿತಿ ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಿ ಶಾಲೆಗಳು ಹಾಗೂ ಪ್ರಥಮ, ದ್ವಿತೀಯ ಪಿಯು ಕಾಲೇಜುಗಳನ್ನು ತೆರೆಯಬಹುದು ಎಂದು ಆರೋಗ್ಯ ಇಲಾಖೆ ಆಯುಕ್ತ ಪಂಕಜ್ ಕುಮಾರ್ ಪಾಂಡೆ ಅವರು ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್.ಆರ್ ಉಮಾಶಂಕರ್‍ಗೆ ಪತ್ರ ಬರೆದಿದ್ದಾರೆ.

ಶಾಲೆಗಳಿಗೆ ಹೋಗಲು ಬ್ಯಾಗ್, ಬುಕ್ ರೆಡಿ ಮಾಡಿ
ಶಾಲೆಗಳನ್ನು ಆರಂಭಿಸಬಹುದು ಎಂದು ಆರೋಗ್ಯ ಇಲಾಖೆ ಗ್ರೀನ್ ಸಿಗ್ನಲ್ ಕೊಟ್ಟಿದ್ದು, ಇನ್ನು ಉಳಿದಿರೋದು ಕೇವಲ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ತೀರ್ಮಾನ ಮಾತ್ರ. ಸಿಎಂ ಯಡಿಯೂರಪ್ಪ ಅಸ್ತು ಎಂದರೆ ಜನವರಿ 1ರಿಂದಲೇ ಆರಂಭವಾಗುವ ಸಾಧ್ಯತೆ ಇದೆ.
ಮೊದಲಿಗೆ 8ನೇ ತರಗತಿಯಿಂದ ಪ್ರಥಮ, ದ್ವಿತೀಯ ಪಿಯುಸಿ ತರಗತಿಗಳನ್ನು ಆರಂಭಿಸಿ ಹಂತ ಹಂತವಾಗಿ ಪ್ರಾಥಮಿಕ ತರಗತಿಗಳನ್ನು ಆರಂಭಿಸಲು ಅನುಮತಿ ಕೊಡುವ ಸಾಧ್ಯತೆ ಇದೆ.

ನಿನ್ನೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅಧ್ಯಕ್ಷತೆಯಲ್ಲಿ ಆರೋಗ್ಯ ಇಲಾಖೆ ಹಾಗೂ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸದಸ್ಯರೊಂದಿಗೆ ಸಭೆ ನಡೆದಿತ್ತು. ಸಭೆಯಲ್ಲಿ ಶಾಲೆಗಳನ್ನು ಆರಂಭಿಸುವ ಬಗ್ಗೆ ಸುದೀರ್ಘ ಚರ್ಚೆ ನಡೆದಿತ್ತು.
ನಾಳೆ ಮಧ್ಯಾಹ್ನ 12.30ಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ಉನ್ನತಪಟ್ಟದ ಸಭೆ ನಡೆಯಲಿದೆ. ಸಭೆಯಲ್ಲಿ ಶಿಕ್ಷಣ, ಆರೋಗ್ಯ ಸಚಿವರು, ಹಿರಿಯ ಅಧಿಕಾರಿಗಳು ಪಾಲ್ಗೊಳ್ಳಲಿದ್ದು, ರಾಜ್ಯದ ಕೊರೊನಾ ಸ್ಥಿತಿಗತಿ ಅವಲೋಕಿಸಿ ಶಾಲೆಗಳನ್ನು ಆರಂಭಿಸುವ ಬಗ್ಗೆ ತೀರ್ಮಾನ ತೆಗೆದುಕೊಳ್ಳುವ ಸಾಧ್ಯತೆ ಇದೆ. ನಾಳೆಯ ಸಭೆಯೇ ಶಾಲೆಗಳನ್ನು ಆರಂಭಿಸುವ ಬಗ್ಗೆ ನಿರ್ಣಾಯಕ ಪಾತ್ರ ವಹಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








