ರಾಜ್ಯದ ಹಲವೆಡೆ 3 ದಿನಗಳ ಕಾಲ ಗುಡುಗು ಸಿಡಿಲು ಸಹಿತ ವರುಣನ ಆರ್ಭಟ
ಬೆಂಗಳೂರು: ರಾಜ್ಯದ ಹಲವೆಡೆ ವರುಣಾರ್ಭಟ ಮುಂದುವರೆದಿದೆ.. ಇನ್ನೂ 3 ದಿನಗಳ ಕಾಲ ರಾಜ್ಯದ ಹಲವೆಡೆ ಕರಾವಳಿ , ದಕ್ಷಿಣ ಒಳನಾಡು ಭಾಗಗಳಲ್ಲಿ ಗುಡುಗು ಸಿಡಿಲು ಸಹಿತ ಭಾರೀ ಮಳೆಯಾಗಬಹುದು ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ..
ಜೂನ್ 10 ರಿಂದ 13 ರವರೆಗೆ ಮುಂಗಾರು ಚುರುಕುಗೊಳ್ಳಲಿದೆ. ಇದರಿಂದ ರಾಜ್ಯದ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 5 ದಿನಗಳ ಹಿಂದೆಯೇ ಮುಂಗಾರು ರಾಜ್ಯಕ್ಕೆ ಪ್ರವೇಶಿಸಿದ್ದರೂ, ಎರಡು ದಿನಗಳ ನಂತರ ಅನೇಕ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಇಳಿಮುಖವಾಗಿದೆ. ಕರಾವಳಿಯ ಉತ್ತರಕನ್ನಡ, ದಕ್ಷಿಣಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಜೂನ್ 10 ರಿಂದ 13 ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು-ಸಿಡಿಲಿನ ಆರ್ಭಟದೊಂದಿಗೆ ಮಳೆಯಾಗಲಿದೆ. ಇಂದು ಕೂಡ ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನೂ ಮಲೆನಾಡಿನಲ್ಲೂ ಉತ್ತಮ ಮಳೆಯಾಗುತ್ತಿದ್ದು, ರೈತರು ಕೃಷಿ ಚಟುವಟಿಕೆಗಳಲ್ಲಿ ತೊಡಗಿದ್ದಾರೆ.