ಮೈಸೂರು : ಕಬಿನಿ ಜಲಾಶಯ ಭಾಗದಲ್ಲಿ ಭಾರಿ ಮಳೆ ಆಗುತ್ತಿದ್ದು, ಜಲಾಶಯಕ್ಕೆ ಒಳಹರಿವು ಹೆಚ್ಚುತ್ತಿದೆ. ಸದ್ಯ ಜಲಾಶಯಕ್ಕೆ ಒಳಹರಿವಿನ ಪ್ರಮಾಣ 13,000 ಕ್ಯೂಸೆಕ್ ಇದೆ. ಜಲಾಯನದ ಪ್ರದೇಶದಲ್ಲಿ ಇನ್ನೂ ಭಾರಿ ಪ್ರಮಾಣದಲ್ಲಿ ಮಳೆಯಾಗುವ ಮುನ್ಸೂಚನೆ ಸಿಕ್ಕಿದ್ದು, ಜಲಾಶಯದಿಂದ 2000 ಕ್ಯೂಸೆಕ್ ನಿಂದ 5000 ಕ್ಯೂಸೆಕ್ ನೀರನ್ನು ಹೊರಬಿಡುವ ಸಾಧ್ಯತೆಯಿದೆ.
ಹೀಗಾಗಿ ಕಬಿನಿ ನದಿಯ ಪಾತ್ರದಲ್ಲಿರುವ ಸಾರ್ವಜನಿಕರು ಮತ್ತು ನದಿಯ ಎರಡೂ ದಂಡೆಯಲ್ಲಿ ವಾಸಿಸುತ್ತಿರುವ ಜನರು ತಮ್ಮ ಆಸ್ತಿ ಪಾಸ್ತಿ ಹಾಗೂ ಜಾನುವಾರು ರಕ್ಷಣೆಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ. ಹಾಗೇ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಎಚ್.ಡಿ.ಕೋಟೆ ತಾಲೂಕಿನ ಕಬಿನಿ ಜಲಾಶಯ ವಿಭಾಗದ ಕಾರ್ಯಪಾಲಕ ಅಭಿಯಂತರರಾದ ಸುಜಾತಾ ಎನ್. ಮನವಿ ಮಾಡಿದ್ದಾರೆ.
ಇನ್ನು ರಾಜ್ಯದ ಕರಾವಳಿ, ಮಲೆನಾಡು ಭಾಗಗಳಲ್ಲಿಯೂ ಉತ್ತಮ ಮಳೆಯಾಗುತ್ತಿದೆ. ಚಿಕ್ಕಮಗಳೂರು ಭಾಗದಲ್ಲಿ ಭಾರಿ ಮಳೆಯಿಂದ ವಿದ್ಯುತ್ ಕಂಬಗಳು ಧರೆಗುರುಳಿದ್ದು, ಹಲವು ಕಡೆ ವಿದ್ಯುತ್ ಸಂಪರ್ಕ ವ್ಯತ್ಯಯವಾಗಿದೆ.








