ಬೆಂಗಳೂರು: ರಾಜ್ಯಕ್ಕೆ ಮುಂಗಾರು ಪ್ರವೇಶವಾಗಿದ್ದು, ಹಲವೆಡೆ ಮಳೆರಾಯ ಅಬ್ಬರಿಸುತ್ತಿದ್ದರೆ, ಹಲವೆಡೆ ಮೌನ ವಹಿಸಿದ್ದಾನೆ. ಹೀಗಾಗಿ ರೈತರು ಚಿಂತಾಕ್ರಾಂತರಾಗಿದ್ದಾರೆ. ಆದರೆ, ಜೂನ್ 24ರಂದು ರಾಜ್ಯದ 8 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆ ಇದ್ದು, ‘ರೆಡ್ ಅಲರ್ಟ್’ ಘೋಷಿಸಲಾಗಿದೆ.
ಜೂನ್ 22 ರಿಂದ ಮಳೆಯ ಅಬ್ಬರ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ 24ರ ವರೆಗೆ ದಕ್ಷಿಣ ಒಳನಾಡು, ಉತ್ತರ ಒಳನಾಡು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಜೂನ್ 22ರಂದು ಕರಾವಳಿಯ ಮೂರು ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ.
ಜೂನ್ 23ರಂದು ಕರಾವಳಿಯ ಮೂರು ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಶಿವಮೊಗ್ಗ ಜಿಲ್ಲೆಗೆ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಅಲ್ಲದೇ, ಅಂದೇ ತುಮಕೂರು, ರಾಮನಗರ, ಮೈಸೂರು, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಹಾವೇರಿ, ಧಾರವಾಡ ಹಾಗೂ ಬೀದರ್ ಜಿಲ್ಲೆಗಳಲ್ಲಿ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ.
ಜೂನ್ 24ರಂದು ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಹಾಗೂ ಶಿವಮೊಗ್ಗದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆ ಇದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಅಂದೇ ಮಂಡ್ಯ, ದಾವಣಗೆರೆ, ಚಾಮರಾಜನಗರ ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಹಾಗೂ ಹಾವೇರಿ, ಚಿತ್ರದುರ್ಗ, ರಾಮನಗರ ಹಾಗೂ ತುಮಕೂರು ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ.