ಬೆಂಗಳೂರು: ಇಂದು ಕೂಡ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ರಾಜ್ಯದ ನಾಲ್ಕು ಜಿಲ್ಲೆಗಳಿಗೆ ರೆಡ್ ಅಲರ್ಟ್ (Red Alert) ಜಾರಿಯಾಗಿದ್ದರೆ ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ (Orange Alert) ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗೆ ರೆಡ್ ಅಲರ್ಟ್ ಜಾರಿಯಾಗಿದ್ದು, ಭಾರೀ ಮಳೆ (Heavy Rain)ಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಉತ್ತರ ಕನ್ನಡ, ಉಡುಪಿ, ಹಾಸನ ಜಿಲ್ಲೆಗಳಿಗೆ ಹವಾಮಾನ ಇಲಾಖೆ (IMD) ಆರೆಂಜ್ ಅಲರ್ಟ್ ಘೋಷಿಸಿದೆ. ಅಲ್ಲದೇ, ಬೆಳಗಾವಿ, ಮೈಸೂರಿಗೆ ಯೆಲ್ಲೋ ಅಲರ್ಟ್ ಜಾರಿಯಾಗಿದೆ. ಇನ್ನುಳಿದಂತೆ ಉತ್ತರ ಒಳನಾಡಿನ ಕೆಲವು ಜಿಲ್ಲೆ ಸೇರಿದಂತೆ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ರೆಡ್ ಅಲರ್ಟ್ ಜಾರಿಯಾದ ಜಿಲ್ಲೆಗಳ ಪೈಕಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ ಎನ್ನಲಾಗಿದೆ. ಉತ್ತರ ಕನ್ನಡ, ಬೆಳಗಾವಿ ಮತ್ತು ಮೈಸೂರು ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯನ್ನು ಹವಾಮಾನ ಇಲಾಖೆ ನೀಡಿದೆ.