ಬೆಂಗಳೂರು: ರಾಜ್ಯದ ಹಲವೆಡೆ ಉತ್ತಮವಾಗಿ ಮಳೆ (Rain)ಸುರಿಯುತ್ತಿದ್ದು, ಮುಂದಿನ 7 ದಿನ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ(Weather Department) ನೀಡಿದೆ.
ಹೀಗಾಗಿ ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್, ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಒಳನಾಡಿನ ಜಿಲ್ಲೆಗಳಲ್ಲಿಯೂ ಮಳೆಯಾಗುವ ಸಾಧ್ಯತೆ ಇದೆ. ಒಳನಾಡು ಜಿಲ್ಲೆಗಳಲ್ಲಿ 45-55 ಕಿಮೀ ವೇಗದಲ್ಲಿ ನಿರಂತರವಾಗಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಗಳಿದ್ದು, ಕರಾವಳಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಇಂದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಶನಿವಾರ ಕರಾವಳಿ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿಯೂ ಭಾರೀ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದ್ದು, ಅಲ್ಲಿ ಕೂಡ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಲ್ಲಿ ಮುಂದಿನ 2 ದಿನಗಳ ಕಾಲ ಮೋಡ ಕವಿದ ವಾತಾವರಣ ಇದ್ದು, ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.