ಬೆಂಗಳೂರು: ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ (Rain In Karnataka) ಸೇರಿದಂತೆ ಹಲವು ಭಾಗಗಳಲ್ಲಿ ವರುಣಾರ್ಭಟ ಮುಂದುವರಿಯಲಿದೆ. ಹೀಗಾಗಿ ಉತ್ತರ ಕನ್ನಡ (UttarKannada) ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಮಲೆನಾಡು ಭಾಗದ ಕೊಡಗು (Kodagu), ಶಿವಮೊಗ್ಗ (Shivamogga) ಹಾಗೂ ಚಿಕ್ಕಮಗಳೂರು (Chikkamagaluru) ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಒಳನಾಡಿನ ಬೆಳಗಾವಿ (Belagavi), ಹಾವೇರಿ (Haveri) ಜಿಲ್ಲೆಗಳಿಗೆ ಆರೆಂಜ್, ಧಾರವಾಡ (Dharwad), ಕಲಬುರಗಿ (Kalaburagi), ರಾಯಚೂರು (Raichur) ಹಾಗೂ ಗದಗ (Gadag) ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಸೂಚಿಸಲಾಗಿದೆ.
ಉಡುಪಿಯಲ್ಲಿ (Udupi) ಕಳೆದ ಎರಡು ದಿನಗಳಿಂದ ಬಿಟ್ಟುಬಿಡದೆ ಮುಂಗಾರು ಮಳೆ ಸುರಿಯುತ್ತಿದೆ. ನದಿಗಳೆಲ್ಲ ತುಂಬಿ ಹರಿಯುತ್ತಿದೆ. ಇಂದ್ರಾಣಿ ನದಿ ಕೃಷ್ಣ ಮಠದ ಪಾರ್ಕಿಂಗ್ ಪ್ರದೇಶದವರೆಗೂ ನೀರು ನುಗ್ಗಿದೆ. ದಕ್ಷಿಣ ಕ್ನನಡ (Dakshina Kannada) ಜಿಲ್ಲೆಯಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ಮೂರನೇ ದಿನವಾದ ಇಂದು ಕೂಡ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.








