ಕೊಪ್ಪಳ: ರಾಜ್ಯದಲ್ಲಿ ಅ.3ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳ ಕೆಲವೆಡೆ ಸಾಧಾರಣಾ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆ, ಕರವಾಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾದ್ಯತೆ ಇದೆ ಎಂದು ತಿಳಿಸಿದೆ.
ಈ ನಡುವೆ, ಕೊಪ್ಪಳ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಕಳೆದ ರಾತ್ರಿ ಸುರಿದ ಭಾರಿ ಮಳೆಗೆ ಕೊಪ್ಪಳ ತಾಲೂಕಿನ ಶಹಪೂರ ಗ್ರಾಮದಲ್ಲಿ ಮನೆಯ ಗೋಡೆ ಕುಸಿದಿದ್ದು, ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕಳಕೇಶ್ ಚೌಡ್ಕಿ ಎಂಬುವರ ಮನೆಯ ಗೋಡೆ ಕುಸಿದಿದ್ದು, ಯಾವುದೇ ಪ್ರಾಣಪಾಯ ಸಂಭವಿಸಿಲ್ಲ. ಗೋಡೆ ಕುಸಿದ ಸದ್ದು ಕೇಳಿದ ಮನೆಯ ಯಜಮಾನ ಮನೆಯಲ್ಲಿದ್ದವರನ್ನು ತಕ್ಷಣವೇ ಹೊರಗೆ ಕರೆತರುವ ಮೂಲಕ ಸಂಭವಿಸಬಹುದಾಗಿದ್ದ ಭಾರಿ ಅನಾಹುತವೊಂದನ್ನು ತಪ್ಪಿಸಿದ್ದಾರೆ.
ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಹಾನಿಯ ಪರಿಶೀಲನೆ ನಡೆಸುವಂತೆ ಗ್ರಾಮಸ್ಥರು ಒತ್ತಾಯ ಮಾಡಿದ್ದಾರೆ.








