ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಮುಂಗಾರು ದುರ್ಬಲಗೊಂಡಿದ್ದು, ರೈತರು ಕಂಗಾಲಾಗುವಂತಾಗಿದೆ. ಜೂನ್ 23 ರಿಂದ 27 ರವರೆಗೆ ಕರಾವಳಿ ಮತ್ತು ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜೂನ್ 23 ರಿಂದ ಜೂನ್ 27 ರವರೆಗೆ 64.5 ಮಿ.ಮೀ ನಿಂದ 115.5 ಮಿ.ಮೀ ವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯ ಅನೇಕ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಹಾಸನ, ಕೊಡಗು, ಕೋಲಾರ, ಮಂಡ್ಯ ಮತ್ತು ಮೈಸೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಬಹುದು. ಕೊಡಗು ಮತ್ತು ಚಿಕ್ಕಮಗಳೂರಿನಲ್ಲಿ ಭಾರೀ ಮಳೆಯಾಗಲಿದ್ದು, ಜೂನ್ 23 ರಂದು ಶಿವಮೊಗ್ಗ, ತುಮಕೂರು ಮತ್ತು ವಿಜಯನಗರದಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ 23 ರಿಂದ ಜೂನ್ 27 ರವರೆಗೆ ಉತ್ತರ ಒಳನಾಡಿನ ಬಾಗಲಕೋಟೆ, ಧಾರವಾಡ, ಗದಗ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಕೆಲವು ದಿನಗಳ ಕಾಲ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.








