ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ
ಬೆಂಗಳೂರು, ಜೂನ್ 15: ರಾಜ್ಯದಾದ್ಯಂತ ಕಳೆದೆರಡು ದಿನಗಳಿಂದ ಜೋರಾಗಿ ಮಳೆ ಸುರಿಯುತ್ತಿದ್ದು ಮುಂದಿನ ಮೂರರಿಂದ ನಾಲ್ಕು ದಿನಗಳ ಕಾಲ ಕರಾವಳಿ ಮತ್ತು ಮಲೆನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈಗಾಗಲೇ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಮೀನುಗಾರಿಕೆಗೆ ನಿಷೇಧ ಹೇರಲಾಗಿದೆ.

ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮಂಡ್ಯ, ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕಳೆದೆರಡು ದಿನಗಳಿಂದ ಉತ್ತಮ ಮಳೆಯಾಗಿದ್ದು, ಅಂಕೋಲದಲ್ಲಿ ರಾಜ್ಯದಲ್ಲಿಯೇ ಅತೀ ಹೆಚ್ಚು ಮಳೆಯಾಗಿದೆ.

ಕರಾವಳಿ ಭಾಗಗಳಲ್ಲಿ ಜೂನ್ 18ರ ವರೆಗೂ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಜೂನ್ 14 ಮತ್ತು 15ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ 115 ಮಿ.ಮೀ. ನಿಂದ 204 ಮಿ.ಮೀ. ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.








