ಬೆಳಗಾವಿ: ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಚಿಕ್ಕೋಡಿ ಭಾಗದ ನದಿಗಳ ಒಳಹರಿವಿನಲ್ಲಿ ದಿಢೀರ್ ಹೆಚ್ಚಳವಾಗಿದೆ. ಹೀಗಾಗಿ ಚಿಕ್ಕೋಡಿ, ನಿಪ್ಪಾಣಿ ತಾಲೂಕಿನ ನದಿ ತೀರದ ಗ್ರಾಮಸ್ಥರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಕಳೆದ ವರ್ಷದ ಪ್ರವಾಹದ ಕಹಿನೆನಪು ಬೆಳಗಾವಿ ಜಿಲ್ಲೆಯ ಜನರನ್ನು ಕಾಡುತ್ತಿದೆ. ರಾಜ್ಯದಲ್ಲಿ ಮಳೆಗಾಲ ಆರಂಭವಾಗಿದ್ದು, ಕೃಷ್ಣಾ ತೀರದ ಜನರಲ್ಲಿ ಮತ್ತೊಮ್ಮೆ ಪ್ರವಾಹದ ಆತಂಕ ಮನೆ ಮಾಡಿದೆ. ಮಹಾರಾಷ್ಟ್ರದ ಘಟ್ಟಪ್ರದೇಶ ಹಾಗೂ ಕೃಷ್ಣಾ ನದಿ ಅಚ್ಚುಕಟ್ಟು ಪ್ರದೇಶದಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ನದಿ ತೀರದ ಗ್ರಾಮಸ್ಥರಲ್ಲಿ ಆತಂಕ ಶುರುವಾಗಿದೆ.
ಭಾರಿ ಮಳೆಯಿಂದ ನಿಪ್ಪಾಣಿ ತಾಲೂಕಿನ ದೂದಗಂಗಾ ನದಿಯ ಒಳಹರಿವಿನ ಪ್ರಮಾಣದಲ್ಲಿ ದಿಢೀರ್ ಹೆಚ್ಚಳವಾಗಿದೆ. ಹೀಗಾಗಿ ಕಾರದಗಾ-ಭೋಜ ಗ್ರಾಮಗಳ ನಡುವಿನ ಸಂಪರ್ಕ ಸೇತುವೆ ಜಲಾವೃತವಾಗಿದೆ. ಪರಿಣಾಮ ಗ್ರಾಮಸ್ಥರು ಸುತ್ತುವರೆದು ಪ್ರಯಾಣ ಬೆಳೆಸುವಂತಾಗಿದೆ.
ದೂದಗಂಗಾ ಹಾಗೂ ವೇದಗಂಗಾ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಳವಾದಂತೆ ಚಿಕ್ಕೋಡಿ ತಾಲೂಕಿನ ಕೃಷ್ಣಾ ನದಿಯಲ್ಲಿ ದಿಢೀರ್ ನೀರಿನ ಪ್ರಮಾಣ ಹೆಚ್ಚಳವಾಗಿದ್ದು, ಒಂದೇ ರಾತ್ರಿಯಲ್ಲಿ ನೀರಿನ ಪ್ರಮಾಣ 4 ಅಡಿ ಹೆಚ್ಚಳವಾಗಿದೆ. ಮಳೆಗಾಲ ಆರಂಭದಲ್ಲೆ ಈ ಪ್ರಮಾಣದಲ್ಲಿ ಮಳೆಯಿಂದ ನದಿಗಳಿಗೆ ನೀರು ಹರಿದು ಬರುತ್ತಿರುವುದು ಈ ಬಾರಿಯೂ ಪ್ರವಾಹದ ಆತಂಕಕ್ಕೆ ಕಾರಣವಾಗಿದೆ.








