ಮುಂಗಾರು ಚುರುಕುಗೊಂಡಿದ್ದು, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಸೇರಿದಂತೆ ರಾಜ್ಯದ ಹಲವೆಡೆ ಭಾನುವಾರ (ಜುಲೈ 23) ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವೆಡೆ ಇಂದು ಮಳೆಯಾಗಲಿದೆ. ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯ ಒಂದೆರಡು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಎಲ್ಲ ಜಿಲ್ಲೆಗಳು, ಉತ್ತರ ಒಳನಾಡಿನ ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ ಮತ್ತು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಯ ಕೆಲವೆಡೆ ಜು.23 ಮತ್ತು 24ರಂದು ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ನಗರದಲ್ಲಿ ಜು.23ರಂದು ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದೆ. ಕೆಲವು ಪ್ರದೇಶಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ. ಹಲವೆಡೆ ವ್ಯಾಪಕ ಮಳೆಯಾಗುತ್ತಿರುವುದರಿಂದಾಗಿ ಹಳ್ಳ-ಕೊಳ್ಳ, ನದಿಗಳು ತುಂಬಿ ಹರಿಯುತ್ತಿವೆ. ಹೀಗಾಗಿ ಹಲವೆಡೆ ಜನ – ಜೀವನ ಅಸ್ತವ್ಯಸ್ಥಗೊಂಡಿದೆ.
ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜುಲೈ 23 ಹಾಗೂ 24 ಎರಡು ದಿನ ಭಾರಿ ಮಳೆಯಾಗಲಿದೆ ಯೆಂದು ಹವಾಮಾನ ಇಲಾಖೆ ಎಚ್ಚರಿಸಿದೆ.