ಮಂಗಳೂರು, ಮೇ 31: ಮೇ 31 ಮತ್ತು ಜೂನ್ 1ರಂದು ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಗಾಳಿ ಮಳೆಯಾಗುವ ಸಾಧ್ಯತೆ ಇರುವುದಾಗಿ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಜೂ.1ರವರೆಗೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಿಸಲಾಗಿದ್ದು, ಉತ್ತರ ಒಳನಾಡಿನಲ್ಲಿ ಜೂ.2 ರಂದು ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಜೂನ್ 1 ರಂದು ಮುಂಗಾರು ಕೇರಳವನ್ನು ಪ್ರವೇಶಿಸಲಿದ್ದು, ರಾಜ್ಯಕ್ಕೆ ಜೂನ್ 5 ಕ್ಕೆ ಮುಂಗಾರು ಮಳೆ ಪ್ರವೇಶಿಸುವ ಸಾಧ್ಯತೆ ಇದೆ.
ಮುಂದಿನ ಮೂರು ದಿನಗಳ ಕಾಲ ರಾಜ್ಯದ ಹಲವು ಭಾಗಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ದೊರೆತಿದ್ದು, ಜನರು ಎಚ್ಚರಿಕೆಯಿಂದ ಇರುವಂತೆ ರಾಜ್ಯ ಹವಾಮಾನ ಇಲಾಖೆ ಸೂಚನೆ ನೀಡಿದೆ.
ಭಾನುವಾರ ಬೆಳಗ್ಗೆಯೇ ಕರಾವಳಿಯ ವಿವಿಧೆಡೆ ಸಾಧಾರಣ ಮಳೆಯಾಗುತ್ತಿದ್ದು, ವಿಪರೀತ ಸೆಕೆಯಿಂದ ಬೆಂದಿದ್ದ ಜನರಿಗೆ ಮುದ ನೀಡುತ್ತಿದೆ. ಕಳೆದ ಕೆಲವು ದಿನಗಳಿಂದ ಗಾಳಿಯಲ್ಲಿ ಅಧಿಕ ತೇವಾಂಶ ಕಂಡುಬಂದ ಕಾರಣ ವಿಪರೀತ ಸೆಕೆಯಾಗುತ್ತಿದ್ದು, ಕಾರ್ಮೋಡ ಕವಿದಿದ್ದರೂ ಮಳೆಯಾಗಿರಲಿಲ್ಲ.
ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಅಲೆಗಳ ಅಬ್ಬರ ಹೆಚ್ಚಿರುವ ಹಿನ್ನಲೆಯಲ್ಲಿ ಜೂನ್ 4ರವರೆಗೆ ಮೀನುಗಾರಿಕೆಗೆ ತೆರಳದಂತೆ ಮೀನುಗಾರಿಕಾ ಇಲಾಖೆಯು ಮೀನುಗಾರರಿಗೆ ಎಚ್ಚರಿಕೆ ನೀಡಿದೆ.








