ರಾಂಚಿ: 4ನೇ ಬಾರಿಗೆ ಜಾರ್ಖಂಡ್ ಸಿಎಂ ಆಗಿ ಹೇಮಂತ್ ಸೊರೆನ್ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟವನ್ನು (INDIA alliance) ಗೆಲ್ಲುಸುವಲ್ಲಿ ಹೇಮಂತ್ ಸೊರೆನ್ (Hemant Soren) ಯಶಸ್ವಿಯಾಗಿದ್ದಾರೆ.
ರಾಂಚಿಯ ಮೊರ್ಹಬಾದಿ ಮೈದಾನದಲ್ಲಿ ಪ್ರಮಾಣ ವಚನ ಸಮಾರಂಭ ನಡೆಯಲಿದ್ದು, ಜಾರ್ಖಂಡ್ ರಾಜ್ಯಪಾಲ ಸಂತೋಷ್ ಕುಮಾರ್ ಗಂಗ್ವಾರ್, 49 ವರ್ಷದ ಹೇಮಂತ್ ಸೊರೆನ್ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ. ಸಚಿವ ಸಂಪುಟಕ್ಕೆ ಸೇರುವವರ ಹೆಸರು ಅಂತಿಮವಾಗದ ಹಿನ್ನೆಲೆಯಲ್ಲಿ ಇಂದು ಹೇಮಂತ್ ಸೊರೆನ್ ಏಕೈಕ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಜೆಎಂಎಂ (JMM) ಮುಖ್ಯಮಂತ್ರಿ ಹುದ್ದೆಯೊಂದಿಗೆ 6 ಸಚಿವ ಸ್ಥಾನಗಳನ್ನು ಉಳಿಸಿಕೊಳ್ಳುವ ನಿರೀಕ್ಷೆಯಿದೆ. ಕಾಂಗ್ರೆಸ್ (Congress)ಗೆ ನಾಲ್ಕು ಸ್ಥಾನಗಳು ಹಾಗೂ ತೇಜಸ್ವಿ ಯಾದವ್ ಅವರ ರಾಷ್ಟ್ರೀಯ ದಳಕ್ಕೆ ಒಂದು ಸ್ಥಾನ ಸಿಗುವ ಸಾಧ್ಯತೆ ಇದೆ. ಅಲ್ಲದೇ, ಇಬ್ಬರು ಶಾಸಕರನ್ನು ಹೊಂದಿರುವ ಸಿಪಿಐ-ಎಂಎಲ್ ಸರ್ಕಾರಕ್ಕೆ ಬಾಹ್ಯ ಬೆಂಬಲ ನೀಡಲಿದೆ. ಪ್ರಮಾಣ ವಚನ ಸಮಾರಂಭಕ್ಕೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಮೇಘಾಲಯ ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ, ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಹಿಮಾಚಲ ಪ್ರದೇಶ ಸಿಎಂ ಸುಖ್ವಿಂದರ್ ಸಿಂಗ್ ಸುಖು ಸೇರಿದಂತೆ ಹಲವರು ಆಗಮಿಸುವ ಸಾಧ್ಯತೆ ಇದೆ.
ಜಾರ್ಖಂಡ್ ಚುನಾವಣೆಯಲ್ಲಿ ಇಂಡಿಯಾ ಒಕ್ಕೂಟ ಸತತ 2ನೇ ಬಾರಿಗೆ ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಗಿದೆ. 81 ಸ್ಥಾನಗಳಲ್ಲಿ ಜೆಎಂಎಂ 34 ಸ್ಥಾನಗಳನ್ನು ಗೆದ್ದರೆ, ಕಾಂಗ್ರೆಸ್ 16, ಆರ್ ಜೆಡಿ 4 ಮತ್ತು ಸಿಪಿಐ (ಎಂಎಲ್) ಎರಡು ಸ್ಥಾನಗಳನ್ನು ಗೆದ್ದಿದೆ.