ರಾಜ್ಯ ಕಾಂಗ್ರೆಸ್ ನಾಯಕರಿಗೆ ಬುಲಾವ್ ನೀಡಿದ ಹೈಕಮಾಂಡ್ – Saaksha Tv
ಬೆಂಗಳೂರು: ರಾಜ್ಯ ಕಾಂಗ್ರೆಸ್ ನಾಯಕರಿಗೆ ಹೈಕಮಾಂಡ್ ಬುಲಾವ್ ನೀಡಿದ್ದು, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ 15 ಜನರು ದೆಹಲಿಗೆ ಪ್ರಯಾಣ ಬೆಳಸಿದ್ದಾರೆ.
ವಿಧಾನಸಭೆ ಚುನಾವಣೆಗೆ ಒಂದು ವರ್ಷ ಬಾಕಿ ಉಳಿದಿರುವಾಗಲೇ ಚುನಾವಣೆ ಸಿದ್ಧತೆಗೆ ಕಾಂಗ್ರೆಸ್ ಮುಂದಾಗಿದೆ. ಈ ನಿಟ್ಟಿನಲ್ಲಿ ಹೈಕಮಾಂಡ್ ಬುಲಾವ್ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರು ದೆಹಲಿಗೆ ತೆರಳಿದ್ದಾರೆ. ಇಂದು ಸಂಜೆ 4 ಗಂಟೆಗೆ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ನಿವಾಸದಲ್ಲಿ ಸಭೆ ನಡೆಯಲಿದೆ. ಸಾರ್ವತ್ರಿಕ ಚುನಾವಣೆಗೆ ಒಂದು ವರ್ಷ ಬಾಕಿ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಕಾರ್ಯತಂತ್ರಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ.
ಸಭೆಯಲ್ಲಿ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪರಿಷತ್ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷರುಗಳಾದ ರಾಮಲಿಂಗಾರೆಡ್ಡಿ, ಸತೀಶ್ ಜಾರಕಿಹೊಳಿ, ಧ್ರುವ ನಾರಾಯಣ್, ಈಶ್ವರ್ ಖಂಡ್ರೆ, ಸಲೀಂ ಅಹ್ಮದ್, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ ,ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ್, ದಿನೇಶ್ ಗುಂಡೂರಾವ್,ಆರ್.ವಿ.ದೇಶಪಾಂಡೆ,ಕೆ.ಹೆಚ್ ಮುನಿಯಪ್ಪ ಹಾಗೂ ವಿಧಾನಸಭೆ ಪ್ರತಿಪಕ್ಷದ ಉಪನಾಯಕ ಯು.ಟಿ ಖಾದರ್ ಅವರು ರಾಹುಲ್ ಸಭೆಯಲ್ಲಿ ಭಾಗಿಯಾಗಲಿದ್ದಾರೆ.
ರಾಜ್ಯದಲ್ಲಿ ಮುಂದಿನ ಅವಧಿಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಏನೆಲ್ಲಾ ಪ್ರಯತ್ನ ನಡೆಸಬೇಕು ಎಂಬ ಚರ್ಚೆ ಸಭೆಯಲ್ಲಿ ನಡೆಯುವ ಸಾಧ್ಯತೆ ಇದೆ. ಅದರಲ್ಲೂ ಮುಖ್ಯವಾಗಿ ನಾಯಕರ ನಡುವೆ ಸಮನ್ವಯ ಮೂಡಿಸುವ ಪ್ರಯತ್ನ ಮಹತ್ವದ್ದಾಗಿದೆ. ಪಕ್ಷ ಸಂಘಟನೆಗೆ ಒತ್ತು ನೀಡುವಂತೆ ಸೂಚನೆ, ಸರ್ಕಾರದ ವಿರುದ್ಧ ನಿರಂತರ ಹೋರಾಟ, ಬಿಜೆಪಿ ಕಾರ್ಯಕ್ರಮಕ್ಕೆ ಪರ್ಯಾಯ ಕಾರ್ಯಕ್ರಮ ರೂಪಿಸುವ ನಿಟ್ಟಿನಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.









