ಕೆ.ಸಿ. ವೇಣುಗೋಪಾಲ್ ಅವರು ಕೇರಳ ಮುಖ್ಯಮಂತ್ರಿ ಆಯ್ಕೆ ಕುರಿತು ಮೊದಲ ಪ್ರತಿಕ್ರಿಯೆ ನೀಡಿದ್ದು, ವಿ.ಡಿ ಸತೀಶನ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಆಯ್ಕೆ ಮಾಡಿರುವುದಕ್ಕೆ ಯಾವುದೇ ಅಸಮಾಧಾನ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಮುಖ್ಯಮಂತ್ರಿ ಸ್ಥಾನಕ್ಕಾಗಿ ಪ್ರಬಲ ಸ್ಪರ್ಧಿಗಳಲ್ಲಿ ಒಬ್ಬರಾಗಿದ್ದ ಕೆ.ಸಿ. ವೇಣುಗೋಪಾಲ್, ಕಾಂಗ್ರೆಸ್ ಪಕ್ಷದಲ್ಲಿ ಹೈಕಮಾಂಡ್ ನಿರ್ಧಾರವೇ ಅಂತಿಮ. ಪಕ್ಷ ತೆಗೆದುಕೊಂಡ ತೀರ್ಮಾನವನ್ನು ನಾನು ಗೌರವದಿಂದ ಸ್ವೀಕರಿಸುತ್ತೇನೆ ಎಂದು ಹೇಳಿದ್ದಾರೆ.
ಪಕ್ಷವು ಎಲ್ಲಾ ಆಯಾಮಗಳಿಂದ ಚರ್ಚಿಸಿ, ರಾಜ್ಯದ ರಾಜಕೀಯ ಪರಿಸ್ಥಿತಿ ಹಾಗೂ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡೇ ಈ ನಿರ್ಧಾರ ತೆಗೆದುಕೊಂಡಿದೆ ಎಂದಿದ್ದಾರೆ.ಇದಕ್ಕೂ ಮುನ್ನ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮುಖ್ಯಮಂತ್ರಿ ಆಯ್ಕೆ ವಿಚಾರದಲ್ಲಿ ಕೆ.ಸಿ. ವೇಣುಗೋಪಾಲ್ ಪರ ಒಲವು ಹೊಂದಿದ್ದಾರೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಆದರೆ ಅಂತಿಮವಾಗಿ ಕಾಂಗ್ರೆಸ್ ಹೈಕಮಾಂಡ್ ವಿ.ಡಿ. ಸತೀಶನ್ ಪರ ತೀರ್ಮಾನ ಕೈಗೊಂಡಿದೆ.
ಕೆ.ಸಿ. ಅವರ ಈ ಪ್ರತಿಕ್ರಿಯೆ ಕಾಂಗ್ರೆಸ್ ಒಳಗಿನ ಅಸಮಾಧಾನ ಊಹಾಪೋಹಗಳಿಗೆ ತೆರೆ ಎಳೆದಂತಾಗಿದೆ. ಇದೀಗ UDF ಸರ್ಕಾರ ರಚನೆಗೆ ಸಿದ್ಧತೆ ನಡೆಸುತ್ತಿದ್ದು, ವಿ.ಡಿ. ಸತೀಶನ್ ಶೀಘ್ರದಲ್ಲೇ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವ ಸಾಧ್ಯತೆ ಇದೆ.








