ಮುಂದಿನ ದಿನಗಳಲ್ಲಿ ಅಭಿವೃದ್ಧಿಗೆ ಹೆಚ್ಚಿನ ವೇಗ : ಬೊಮ್ಮಾಯಿ
ಬೆಂಗಳೂರು : ಮುಂಬರುವ ದಿನಗಳಲ್ಲಿ ಅಭಿವೃದ್ಧಿಯ ವೇಗ ಹೆಚ್ಚಿಸುವ ಪ್ರಯತ್ನ ಮಾಡುತ್ತೇವೆ. ಆ ಮೂಲಕ ಸಮೃದ್ಧ ಮತ್ತು ಪ್ರಗತಿಪರ ನವ ಕರ್ನಾಟಕ ನಿರ್ಮಾಣಕ್ಕೆ ಬದ್ಧರಾಗಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬೊಮ್ಮಾಯಿ ಅಧಿಕಾರ ಸ್ವೀಕರಿಸಿ ಇಂದಿಗೆ ನೂರು ದಿನ ಕಳೆದಿದೆ. ಈ ಹಿನ್ನೆಲೆಯಲ್ಲಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದು,
ರಾಜ್ಯದಲ್ಲಿ ಇಂದಿಗೆ ನನ್ನ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ನೂರು ದಿನದ ಸಂಭ್ರಮ. ಮಾನ್ಯ ಪ್ರಧಾನಿ ಶ್ರೀ ಪ್ರಧಾನಿ ನರೇಂದ್ರ ಮೋದಿ ಅವರ ‘ಸಬ್ಕಾ ಸಾಥ್, ಸಬ್ಕಾ ವಿಕಾಸ್, ಸಬ್ಕಾ ವಿಶ್ವಾಸ್’ ಎಂಬ ಧ್ಯೇಯವಾಕ್ಯದಿಂದ ನಾವು ಪ್ರೇರಿತರಾಗಿ ಈ ಹಾದಿಯಲ್ಲಿಯೇ ನಾವು ಸಾಗುತ್ತಿದ್ದೇವೆ.
ಈ ಪ್ರೇರಣೆಯೊಂದಿಗೆ ರಾಜ್ಯದ 6.5 ಕೋಟಿ ಕನ್ನಡಿಗರ ಆಶೀರ್ವಾದದೊಂದಿಗೆ ಕರ್ನಾಟಕದ ಅಭಿವೃದ್ಧಿಗೆ ನಮ್ಮ ಸರ್ಕಾರ ಪಣ ತೊಟ್ಟಿದೆ. ಕನ್ನಡಿಗರ ಬದುಕನ್ನು ನವ ಚೈತನ್ಯದಿಂದ ಸಶಕ್ತಗೊಳಿಸುವ ನಿಟ್ಟಿನಲ್ಲಿ ಕೆಲಸ ಮಾಡುವುದನ್ನು ಮುಂದುವರೆಸಿದ್ದೇವೆ.
ಮುಂಬರುವ ದಿನಗಳಲ್ಲಿ ಅಭಿವೃದ್ಧಿಯ ವೇಗ ಹೆಚ್ಚಿಸುವ ಪ್ರಯತ್ನ ಮಾಡುತ್ತೇವೆ. ಆ ಮೂಲಕ ಸಮೃದ್ಧ ಮತ್ತು ಪ್ರಗತಿಪರ ನವ ಕರ್ನಾಟಕ ನಿರ್ಮಾಣಕ್ಕೆ ಬದ್ಧರಾಗಿದ್ದೇವೆ. ಈ ಸುಸಂದರ್ಭದಲ್ಲಿ ನನ್ನ ಸಂಪುಟದ ಸಹೋದ್ಯೋಗಿಗಳಿಗೆ ಶುಭಾಷಯ ಹಾಗೂ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.









