ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಭಾರೀ ಮಳೆ (Heavy Rain)ಯಿಂದಾಗಿ ಬೆಂಗಳೂರು (Bengaluru) ನಗರ ಜಿಲ್ಲೆಯಾದ್ಯಂತ ಸೋಮವಾರವೂ ರಜೆ ಘೋಷಿಸಲಾಗಿದೆ.
ರಜೆ (Holiday) ಘೋಷಿಸಿ ಜಿಲ್ಲಾಧಿಕಾರಿ ಜಗದೀಶ್ ಆದೇಶ ಹೊರಡಿಸಿದ್ದಾರೆ. ಬೆಂಗಳೂರು ನಗರ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದೆ. ಸೋಮವಾರ ಮುಂಜಾಗ್ರತಾ ಕ್ರಮವಾಗಿ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೆಂಗಳೂರು ನಗರ ಜಿಲ್ಲೆಯ ಎಲ್ಲ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಖಾಸಗಿ/ಅನುದಾನಿತ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಬೆಂಗಳೂರು ನಗರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್ ಮೌಖಿಕವಾಗಿ ಆದೇಶಿಸಿದ್ದಾರೆ.
ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್, ಐಟಿಐಗಳಿಗೆ ರಜೆ ಘೋಷಿಸಿಲ್ಲ. ತುರ್ತು ನಿರ್ಧಾರವಾದ ಕಾರಣ ಮೌಖಿಕವಾಗಿ ಆದೇಶಿಸಿದ್ದು, ಅಧಿಕೃತ ಆದೇಶ ಹೊರಡಿಸಲಾಗುವುದು ಎಂದು ಹೇಳಿದ್ದಾರೆ.
ಕಾಲೇಜುಗಳಲ್ಲಿ ಪಾಠ, ಪ್ರವಚನಗಳನ್ನು ನಡೆಸುವಾಗ ಕೆಲವೊಂದು ಅಂಶಗಳನ್ನು ಪರಿಗಣಿಸುವಂತೆ ಕಾಲೇಜುಗಳ ಮುಖ್ಯಸ್ಥರಿಗೆ ಹಾಗೂ ಸಂಬಂಧ ಪಟ್ಟವರಿಗೆ ಸಾಮಾನ್ಯ ಸೂಚನೆಯನ್ನು ನೀಡಲಾಗಿದ್ದು, ಕಾಲೇಜು ಮುಖ್ಯಸ್ಥರು ವಿದ್ಯಾರ್ಥಿಗಳು ಕಾಲೇಜಿಗೆ ಆಗಮಿಸುವಾಗ ಹಾಗೂ ಮನೆಗೆ ತೆರಳುವ ಸಂದರ್ಭದಲ್ಲಿ ಯಾವುದೇ ಅಪಾಯವಿಲ್ಲದೇ ಸುರಕ್ಷಿತವಾಗಿ ತಲುಪುವ ಬಗ್ಗೆ ಗಮನವಹಿಸಬೇಕು ಎಂದಿದ್ದಾರೆ. ಸಿಲಿಕಾನ್ ಸಿಟಿಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನರು ಪರಿತಪಿಸುವಂತಾಗಿದೆ.