ಬಳ್ಳಾರಿ: ಉತ್ತರ ಕರ್ನಾಟಕದಲ್ಲಿ ತಲೆದೋರಿರುವ ಭೀಕರ ಪ್ರವಾಹದಿಂದ ಮನೆ-ಮಠ ಹಾಗೂ ಬೆಳೆ ಕಳೆದುಕೊಂಡ ರೈತರಿಗೆ ಹೆಚ್ಚಿನ ಪರಿಹಾರ ನೀಡಲು ಪ್ರಧಾನಿ ನರೇಂದ್ರ ಮೋದಿ ಜತೆ ಚರ್ಚೆ ನಡೆಸಿರುವುದಾಗಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ವಿಜಯಪುರ ಹಾಗೂ ಕಲಬುರಗಿ ಜಿಲ್ಲೆಗಳ ಪ್ರವಾಹ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದ ಯಡಿಯೂರಪ್ಪ, ಅದಕ್ಕೂ ಮುನ್ನ ಬಳ್ಳಾರಿಯ ಜಿಂದಾಲ್ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಪರಿಹಾರ ಬಿಡುಗಡೆ ಸಂಬಂಧ ಪ್ರಧಾನಿ ಜತೆ ಚರ್ಚೆ ನಡೆಸಿದ್ದೇನೆ. ಪ್ರವಾಹ ಪರಿಸ್ಥಿತಿ ನಿಭಾಯಿಸಲು ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಪ್ರಧಾನಿ ಭರವಸೆ ನೀಡಿದ್ದಾರೆ ಎಂದರು.
ಪ್ರವಾಹ ಪೀಡಿತ ಜಿಲ್ಲೆಗಳಿಗೆ ರಾಜ್ಯ ಸರ್ಕಾರದಿಂದ ಹಣ ಬಿಡುಗಡೆ ಮಾಡಲಾಗಿದೆ. ಇಂದು ವಿಜಯಪುರದಲ್ಲಿ ವೈಮಾನಿಕ ಸಮೀಕ್ಷೆ ನಡೆಸುತ್ತಿದ್ದೇನೆ. ನಂತರ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿ ಹಣ ಬಿಡುಗಡೆ ಮಾಡಲಾಗುವುದು. ನೆರೆಯಿಂದ ಮನೆ ಹಾಗೂ ಬೆಳೆ ಕಳೆದುಕೊಂಡವರಿಗೆ ಪರಿಹಾರ ಸೇರಿದಂತೆ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದು ಬಿಎಸ್‍ವೈ ಹೇಳಿದರು.
ಮುಂದಿನ ನಾಲ್ಕೈದು ದಿನಗಳ ನಂತರ ಪ್ರವಾಹದ ಹಾನಿ ಬಗ್ಗೆ ಅಂದಾಜು ಸಿದ್ದಪಡಿಸಿ ಕೇಂದ್ರ ಸರ್ಕಾರಕ್ಕೆ ವರದಿ ನೀಡಲಾಗುವುದು. ವರದಿ ನೀಡಿದ ಬಳಿಕ ಕೇಂದ್ರ ತಂಡ ರಾಜ್ಯಕ್ಕೆ ಬಂದು ಹಾನಿಯ ಅಂದಾಜು ಪರಿಶೀಲನೆ ನಡೆಸಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel