ಬೆಂಗಳೂರು : ನಕಲಿ ದಾಖಲೆಗಳನ್ನು ನೀಡಿ ಮನೆ ಪಡೆದುಕೊಳ್ಳುವ ಪ್ರಕರಣಗಳನ್ನು ಪತ್ತೆಹಚ್ಚಲಾಗಿದೆ, ಇದರಿಂದಾಗಿ ಸರ್ಕಾರಕ್ಕೆ 8000 ಕೋಟಿ ರೂ.ಗಳನ್ನು ಉಳಿತಾಯವಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅಧಿಕಾರಿಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
ಇಂದು ನಡೆದ ವಸತಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಬಿ.ಎಸ್.ಯಡಿಯೂರಪ್ಪ, ಪ್ರಗತಿಯಲ್ಲಿರುವ 9.74 ಲಕ್ಷ ಮನೆಗಳನ್ನು ಪೂರ್ಣಗೊಳಿಸಲು ಒಟ್ಟು 10,194 ಕೋಟಿ ರೂ.ಗಳ ಅನುದಾನದ ಮಂಜೂರಾತಿ ಬಗ್ಗೆ ಕ್ರಮ ವಹಿಸಲಾಗುವುದು. ಅಲ್ಲದೆ ನಕಲಿ ದಾಖಲೆಗಳನ್ನು ನೀಡಿ ಮನೆ ಪಡೆದುಕೊಳ್ಳುವ ಪ್ರಕರಣಗಳನ್ನು ಪತ್ತೆಹಚ್ಚಿ ಸರ್ಕಾರಕ್ಕೆ 8000 ಕೋಟಿ ರೂ.ಗಳನ್ನು ಉಳಿತಾಯವಾಗಿದೆ. ಒಳ್ಳೆಯ ಕೆಲಸ ಮಾಡಿದ್ದೀರಿ ಎಂದು ಅಧಿಕಾರಿಗಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ವಸತಿ ಯೋಜನೆಗಳ ಪಾರದರ್ಶಕ ಅನುಷ್ಠಾನಕ್ಕೆ ತಾಂತ್ರಿಕ ನೂನ್ಯತೆಗಳನ್ನು ಸರಿಪಡಿಸಿ, ಅನುದಾನ ದುರುಪಯೋಗ ತಡೆಯಲು ಅಭಿವೃದ್ಧಿಪಡಿಸಲಾಗಿರುವ ವಿಜಿಲ್ ಆ್ಯಪ್ ತಂತ್ರಾಂಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಕೊಡಗು ಪುನರ್ವಸತಿ ಯೋಜನೆಯಡಿ 115 ಮನೆಗಳನ್ನು ಹಂಚಿಕೆ ಮಾಡಲಾಗಿದೆ. ಪೂರ್ಣಗೊಂಡಿರುವ 405 ಮನೆಗಳನ್ನು ಶೀಘ್ರಫಲಾನುಭವಿಗಳಿಗೆ ಹಸ್ತಾಂತರಿಸಿ ಎಂದು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಇನ್ನೂ ಸಭೆಯಲ್ಲಿ ಮಾತನಾಡಿದ ವಸತಿ ಸಚಿವ ವಿ.ಸೋಮಣ್ಣ, ಗ್ರಾಮೀಣ ಪ್ರದೇಶಗಳಲ್ಲಿ 1.24 ಲಕ್ಷ ನಿವೇಶನಗಳನ್ನು ಬಡವರಿಗೆ ನೀಡಲು ಗುರುತಿಸಲಾಗಿದೆ. 100 ಕೋಟಿ ರೂ.ಗಳು ಲಭ್ಯವಿದೆ. ನಿವೇಶನಗಳನ್ನು ಅಭಿವೃದ್ಧಿಪಡಿಸಿ ಹಂಚಿಕೆ ಮಾಡಲು ಸುಮಾರು 1000 ಕೋಟಿ ರೂ.ಗಳ ಅವಶ್ಯಕತೆಯಿದೆ.
ಪ್ರಧಾನಮಂತ್ರಿ ಆವಾಸ್ ಯೋಜನೆ (ನಗರ) ಸರ್ಕಾರದ ಜಮೀನಿನಲ್ಲಿರುವ ಕೊಳಚೆ ಪ್ರದೇಶಗಳ ನಿವಾಸಿಗಳಿಗೆ ಹಕ್ಕುಪತ್ರ ನೀಡಬೇಕಿದೆ. ಕೊಳಚೆ ಅಭಿವೃದ್ಧಿ ಮಂಡಳಿಗೆ ಬದಲಾಗಿ ರಾಜೀವ್ ಗಾಂಧಿ ವಸತಿ ನಿಗಮದಲ್ಲಿ ವಿಲೀನಗೊಳಿಸಿದರೆ ಕೊಳೆಗೇರಿಗಳ ಸಮಸ್ಯೆಗಳನ್ನು ವ್ಯವಸ್ಥಿತವಾಗಿ ಬಗೆಹರಿಸಬಹುದಾಗಿದೆ ಎಂದು ಸಚಿವರು ಸಲಹೆ ನೀಡಿದರು.
ಸಭೆಗೆ ಮಾಹಿತಿ ನೀಡಿದ ಅಧಿಕಾರಿಗಳು, ಕರ್ನಾಟಕ ಗೃಹ ಮಂಡಳಿ ವತಿಯಿಂದ ಆನೇಕಲ್ ತಾಲ್ಲೂಕು ಜಿಗಣಿ ಹೋಬಳಿಯ ಕೋನಸಂದ್ರ, ಬೊಮ್ಮಂಡಹಳ್ಳಿ, ಕಾಡುಜಕ್ಕನಹಳ್ಳಿ ಮತ್ತು ಕಸಬಾ ಹೋಬಳಿಯ ಇಂಗ್ಲವಾಡಿ, ಬಗ್ಗನದೊಡ್ಡಿ ಗ್ರಾಮಗಳಲ್ಲಿ ಪ್ರಧಾನಮಂತ್ರಿ ವಸತಿ ಬಡಾವಣೆಯನ್ನು 1264 ಕೋಟಿ ರೂ. ಗಳ ಅಂದಾಜು ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು.ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದಡಿ 4000 ಕ್ಕಿಂತ ಹೆಚ್ಚು ದೂರುಗಳು ದಾಖಲಾಗಿದ್ದು, ಸುಮಾರು 700 ಕ್ಕೂ ಹೆಚ್ಚು ದೂರುಗಳನ್ನು ವಿಲೇವಾರಿ ಮಾಡಲಾಗಿದೆ ಹಾಗೂ ದೂರು ವಿಲೇವಾರಿಗೆ ಹೆಚ್ಚಿನ ಸಿಬ್ಬಂದಿಯ ಅಗತ್ಯವಿದೆ ಎಂದು ಹೇಳಿದರು.
ಪರಿಶೀಲನಾ ಸಭೆಯಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಮುಖ್ಯ ಕಾರ್ಯದರ್ಶಿ ಟಿ ಎಂ ವಿಜಯಭಾಸ್ಕರ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐಎಸ್ಎನ್ ಪ್ರಸಾದ್, ವಸತಿ ಇಲಾಖೆ ಕಾರ್ಯದರ್ಶಿ ಮನೋಜ್ ಕುಮಾರ್ ಮೀನಾ, ರಾಜೀವ್ ಗಾಂಧಿ ವಸತಿ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೆಶಕರು ಉಪಸ್ಥಿತರಿದ್ದರು








