ಲಡಾಖ್ : ಲಡಾಖ್ ಗಾಲ್ವಾನ್ ಕಣಿವೆ ಪ್ರದೇಶದಲ್ಲಿ ನಡೆದ ಚೀನಾ ಮತ್ತು ಭಾರತದ ನಡುವೆ ಘರ್ಷಣೆಯಲ್ಲಿ 20 ಮಂದಿ ಭಾರತೀಯ ಸೈನಿಕರು ಪ್ರಾಣ ಕಳೆದುಕೊಂಡಿದ್ದಾರೆ. ಆದರೂ ಪ್ರಧಾನಿ ಮೋದಿ ಏಕೆ ಮೌನವಾಗಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ”ಮೋದಿ ಏಕೆ ಮೌನವಾಗಿದ್ದಾರೆ? ಅವರು ಏಕೆ ಅಡಗಿಕೊಂಡಿದ್ದಾರೆ? ಸಾಕಾಗಿದೆ, ಚೀನಾ ವಿಚಾರದಲ್ಲಿ ಏನಾಗುತ್ತಿದೆ ಎಂಬುದು ನಮಗೆ ಗೊತ್ತಾಗಬೇಕಿದೆ. ನಮ್ಮ ಯೋಧರನ್ನು ಕೊಲ್ಲಲು ಚೀನಾಗೆ ಎಷ್ಟು ಧೈರ್ಯ?
ನಮ್ಮ ಭೂಮಿಯನ್ನು ವಶಪಡಿಸಿಕೊಳ್ಳಲು ಎಷ್ಟು ಧೈರ್ಯ?” ಎಂದು ಆಕ್ರೋಶ ಹೊರಹಾಕಿದ್ದಾರೆ.
ಮತ್ತೊಂದು ಟ್ವೀಟ್ ನಲ್ಲಿ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಹುತಾತ್ಮ ಯೋಧರಿಗೆ ರಾಹುಲ್ ಗಾಂಧಿ ತೀವ್ರ ಸಂತಾಪ ಸೂಚಿಸಿದ್ದಾರೆ.
“ಚೀನಾದೊಂದಿಗೆ ಸೆಣಸಿ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಹುತಾತ್ಮ ಯೋಧರ ಕುರಿತು ನನಗಾಗುತ್ತಿರುವ ನೋವನ್ನು ಪದಗಳಲ್ಲಿ ವಿವರಿಸಲು ಸಾಧ್ಯವಿಲ್ಲ. ಎಲ್ಲ ಪ್ರೀತಿಪಾತ್ರರಿಗೆ ಸಂತಾಪ ಸೂಚಿಸುತ್ತಿದ್ದೇನೆ. ಈ ಕಷ್ಟದ ಸಂದರ್ಭದಲ್ಲಿ ಹುತಾತ್ಮ ಯೋಧರ ಕುಟುಂಬಗಳೊಂದಿಗೆ ನಾವು ನಿಲ್ಲುತ್ತೇವೆ ಎಂದು ಬರೆದುಕೊಂಡಿದ್ದಾರೆ ರಾಹುಲ್ ಗಾಂಧಿ.
ಇನ್ನು ಸೋಮವಾರ ನಡೆದ ಘರ್ಷಣೆಯಲ್ಲಿ ಚೀನಾದ ಸುಮಾರು 43 ಮಂದಿ ಸೈನಿಕರು ಸಾವನ್ನಪ್ಪಿದ್ದಾರೆ ಹಾಗೂ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ.