ಬೆಂಗಳೂರು : ರಾಜ್ಯ ಸರ್ಕಾರ ಹತ್ತನೇ ತರಗತಿಯ ಪಠ್ಯಕ್ರಮ ಏಸು ಕ್ರಿಸ್ತ, ಪ್ರವಾದಿ ಪೈಗಂಬರ್, ಟಿಪ್ಪುಸುಲ್ತಾನ್, ಸಂಗೊಳ್ಳಿ ರಾಯಣ್ಣ, ರಾಣಿ ಅಬ್ಬಕ್ಕದೇವಿ ಮೊದಲಾದವರಿಗೆ ಸಂಬಂಧಿಸಿದ ಪಠ್ಯವನ್ನು ಕೈ ಬಿಟ್ಟಿರೋದನ್ನ ಮಾಜಿ ಸಿಎಂ ಸಿದ್ದರಾಮಯ್ಯ ಖಂಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, “ಏಸು ಕ್ರಿಸ್ತ, ಪ್ರವಾದಿ ಪೈಗಂಬರ್, ಟಿಪ್ಪುಸುಲ್ತಾನ್, ಸಂಗೊಳ್ಳಿ ರಾಯಣ್ಣ, ರಾಣಿ ಅಬ್ಬಕ್ಕದೇವಿ ಮೊದಲಾದವರಿಗೆ ಸಂಬಂಧಿಸಿದ ಪಠ್ಯವನ್ನು ಹತ್ತನೇ ತರಗತಿಯ ಪಠ್ಯಕ್ರಮದಿಂದ ಕೈಬಿಟ್ಟಿರುವ ರಾಜ್ಯ ಸರ್ಕಾರದ ನಿರ್ಧಾರ ಖಂಡನೀಯ. ಅಧಿಕೃತ ಸರ್ಕಾರ ದುರ್ಬಲಗೊಳ್ಳುತ್ತಿದೆ, ಅನಧಿಕೃತ ಸಂಘಿ ಸರ್ಕಾರ ಬಲಗೊಳ್ಳುತ್ತಿದೆ ಎಂದು ಟೀಕಿಸಿದ್ದಾರೆ.
ಮತ್ತೊಂದು ಟ್ವೀಟ್ ನಲ್ಲಿ, “10 ನೇ ತರಗತಿ ಪಠ್ಯದಿಂದ ಕೆಲವು ಮಹಾಪುರಷರಿಗೆ ಸಂಬಂಧಿಸಿದ ಪಾಠವನ್ನು ಕೈ ಬಿಟ್ಟಿದ್ದರಲ್ಲಿ ಸರ್ಕಾರದ ಪಾತ್ರವಿಲ್ಲ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಆದರೆ ಕರ್ನಾಟಕ ಪಠ್ಯ ಪುಸ್ತಕ ಸಮಿತಿ ಸರ್ಕಾರಕ್ಕಿಂತಲೂ ಉನ್ನತ ಸಂಸ್ಥೆಯೇ? ಅದನ್ನು ತಕ್ಷಣ ವಾಪಸು ಪಡೆಯಿರಿ, ಇಲ್ಲದೇ ನಿಮ್ಮ ಪಾತ್ರ ಒಪ್ಪಿಕೊಳ್ಳಿ” ಎಂದು ಒತ್ತಾಯಿಸಿದ್ದಾರೆ.
ಕೊನೆಯ ಟ್ವೀಟ್ ನಲಿ ಸರ್ಕಾರಕ್ಕೆ ಎಚ್ಚರಿಕೆ ನೀಡಿರುವ ಸಿದ್ದು, “ಕೊರೊನಾ ನಿಯಂತ್ರಿಸಲಾಗದ ರಾಜ್ಯಸರ್ಕಾರ , ಪರಿಸ್ಥಿತಿಯ ದುರ್ಬಳಕೆ ಮಾಡಿಕೊಂಡು ಪಠ್ಯಪುಸ್ತಕಗಳನ್ನು ಕೇಸರೀಕರಣಗೊಳಿಸಿ ಗುಪ್ತ ಅಜೆಂಡಾ ಅನುಷ್ಠಾನಗೊಳಿಸಲು ಹೊರಟಿದೆ . ಸಂವಿಧಾನದ ಆಶಯಗಳನ್ನು ಬುಡಮೇಲು ಮಾಡುವ ಈ ಹುನ್ನಾರವನ್ನು ಕಾಂಗ್ರೆಸ್ ಪಕ್ಷ ಸಹಿಸುವುದಿಲ್ಲ , ಹೋರಾಟ ಅನಿವಾರ್ಯವಾಗಬಹುದು ಎಂದು ಬರೆದುಕೊಂಡಿದ್ದಾರೆ.