ಬೆಂಗಳೂರು: ಇಲ್ಲಿರುವುದು ನಾನೊಬ್ಬನೇ ಸಿಎಂ. ನಾನು ಸ್ಟ್ರಾಂಗ್ ಸಿಎಂ. ನಿಮ್ಮ ಹಾಗೆ ವೀಕ್ ಪಿಎಂ ಅಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆರೋಪ ಮಾಡಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ನಿಮ್ಮ ಹಾಗೆ ನಾನು ‘ʼವೀಕ್ ಪಿಎಂ ಅಲ್ಲ. ನಿಮ್ಮ ಅಭಿಮಾನಿಗಳು ನಿಮ್ಮನ್ನು ವಿಶ್ವಗುರು ಎಂದು ಕೊಂಡಾಡುತ್ತಾರೆ. ಆದರೆ ನೀವೊಬ್ಬ ‘‘ವೀಕ್ ಪಿಎಂ’’ ಎಂದು ಮತ್ತೆ ಮತ್ತೆ ತೋರಿಸಿಕೊಡುತ್ತಿದ್ದೀರಿ ಎಂದು ಬರೆದುಕೊಂಡಿದ್ದಾರೆ.
ಪ್ರಧಾನಿ ಅವರೇ, ಕಾಂಗ್ರೆಸ್ ಪಕ್ಷದಲ್ಲಿ ಸೂಪರ್ ಸಿಎಂ, ಶ್ಯಾಡೋ ಸಿಎಂ ಗಳಿದ್ದಾರೆ ಎಂದು ಶಿವಮೊಗ್ಗದ ನಿಮ್ಮ ಪಕ್ಷದ ಸಭೆಯಲ್ಲಿ ನೀವು ಗೇಲಿ ಮಾಡಿದ್ದೀರಿ! ನಮ್ಮಲ್ಲಿ ಸೂಪರ್ರೂ ಇಲ್ಲ, ಶ್ಯಾಡೋನೂ ಇಲ್ಲ. ಇರುವುದು ಒಬ್ಬರೇ ಸಿಎಂ ಅದು ‘‘ಸ್ಟ್ರಾಂಗ್ ಸಿಎಂ’’, ನಿಮ್ಮ ಹಾಗೆ ನಾನು ‘‘ವೀಕ್ ಪಿಎಂ’’ ಅಲ್ಲ. ಮೋದಿಯವರೇ ನಿಮ್ಮನ್ನು ನೀವು 56 ಇಂಚಿನ ಎದೆಯುಳ್ಳವನು ಎಂದು ಬಣ್ಣಿಸಿಕೊಳ್ಳುತ್ತೀರಿ, ನಿಮ್ಮ ಅಭಿಮಾನಿಗಳು ನಿಮ್ಮನ್ನು ವಿಶ್ವಗುರು ಎಂದು ಕೊಂಡಾಡುತ್ತಾರೆ. ಆದರೆ ನೀವೊಬ್ಬ ‘‘ವೀಕ್ ಪಿಎಂ’’ ಎಂದು ಮತ್ತೆ ಮತ್ತೆ ತೋರಿಸಿಕೊಡುತ್ತಿದ್ದೀರಿ ಎಂದು ವ್ಯಂಗ್ಯವಾಡಿದ್ದಾರೆ.
ಅಲ್ಲದೇ, ಬಿ.ಎಸ್ ಯಡಿಯೂರಪ್ಪನವರು ಒಂದು ಕಾಲದಲ್ಲಿ ನಿಮ್ಮ ನಾಯಕತ್ವದ ವಿರುದ್ಧವೇ ಬಂಡಾಯ ಎದ್ದವರು. ನಿಮ್ಮನ್ನು ಹೀನಾಯವಾಗಿ ನಿಂದಿಸಿದವರು. ಅಂತಹವರ ಕಾಲಿಗೆ ಬಿದ್ದು ಮತ್ತೆ ಪಕ್ಷಕ್ಕೆ ಕರೆತಂದು ಮೆರವಣಿಗೆ ಮಾಡುವ ಮೂಲಕ ನೀವೊಬ್ಬ ‘‘ವೀಕ್ ಪಿಎಂ’’ ಎಂದು ನೀವೇ ತೋರಿಸಿಕೊಟ್ಟಂತಾಗಲಿಲ್ಲವೇ ಎಂದು ಸಿಎಂ ಪ್ರಶ್ನಿಸಿದ್ದಾರೆ.
ಶಿವಮೊಗ್ಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು, ಕಾಂಗ್ರೆಸ್ ನಲ್ಲಿ ಮೂವರು ಸಿಎಂ ಇದ್ದಾರೆ. ಫ್ಯೂಚರ್ ಸಿಎಂ, ಇನ್ನೊಬ್ಬರು ಶ್ಯಾಡೋ ಸಿಎಂ ಮತ್ತೊಬ್ಬರು ಸೂಪರ್ ಸಿಎಂ ಎಂದು ಸಿದ್ದರಾಮಯ್ಯ, ಡಿಕೆಶಿ ಹಾಗೂ ಸುರ್ಜೇವಾಲಾ ವಿರುದ್ಧ ವ್ಯಂಗ್ಯವಾಡಿದ್ದರು.