ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ.
ತಮ್ಮ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಅವರು, ಪ್ರಜಾಪ್ರಭುತ್ವ ಉಳಿಸುವ ಕಾಳಜಿ ಇದ್ದರೇ ಮೊದಲು ಸ್ಥಳೀಯ ಸಂಸ್ಥೆಗಳ ಚುನಾವಣೆ (Local Body Elections) ಮಾಡಿ ಅಂತ ಸಿಎಂ ಸಿದ್ದರಾಮಯ್ಯಗೆ (Siddaramaiah) ಹೇಳಿದ್ದಾರೆ.
ಮಾನವ ಸರಪಳಿ ನೆಪದಲ್ಲಿ ಪುಕ್ಕಟೆ ಪ್ರಚಾರ ಗಿಟ್ಟಿಸಿದ ಕಾಂಗ್ರೆಸ್ ಸರ್ಕಾರಕ್ಕೆ ಪ್ರಜಾಪ್ರಭುತ್ವ ಉಳಿಸುವ ಕಾಳಜಿಯೇ ಇಲ್ಲ. ಇದ್ದರೇ ಮೊದಲು ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಿ. ಅಧಿಕಾರಕ್ಕೇರಿದಾಗಿನಿಂದ ಪ್ರಜಾಪ್ರಭುತ್ವದ ಸರಪಳಿಯ ತಳಮಟ್ಟದ ಆಧಾರಸ್ತಂಭಗಳಾದ ಜಿಲ್ಲಾ ಮತ್ತು ತಾಲೂಕು ಪಂಚಾಯತಿ ಮತ್ತು ಬಿಬಿಎಂಪಿ ಚುನಾವಣೆ ನಡೆಸಿಲ್ಲ, ಯಾಕೆ? ಎಂದು ವಾಗ್ದಾಳಿ ನಡೆಸಿದ್ದಾರೆ.
ಸ್ಥಳೀಯ ಸರ್ಕಾರಗಳ ಕತ್ತು ಹಿಸುಕಿ ನೀವು ವಿಧಾನಸೌಧದಲ್ಲಿ ಮೆರೆದರೇನು ಭಾಗ್ಯ? ಮಾನ್ಯ ಸಿದ್ದರಾಮಯ್ಯನವರೇ, ನೀವು ಅಧಿಕಾರಕ್ಕೆ ಬಂದು ವರ್ಷದ ಮೇಲೆ 4 ತಿಂಗಳಾಯಿತು (2023 ಮೇ 20). ಈವರೆಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಸಾಧ್ಯವಾಗಿಲ್ಲ. ನಿಮ್ಮ ಪ್ರಜಾಪ್ರಭುತ್ವ, ಜನಪರತೆ, ಜಾಹೀರಾತುಗಳಲ್ಲಷ್ಟೆ ಝಗಮಗಿಸುತ್ತಿದೆ. ನಿಮ್ಮದು ಪ್ರಚಾರ ಜಾಸ್ತಿ, ಆಚಾರ ನಾಸ್ತಿ ಎಂದು ವ್ಯಂಗ್ಯವಾಡಿದ್ದಾರೆ.
ವಿಚ್ಚಿಧ್ರ ಶಕ್ತಿಗಳನ್ನು ದಮನ ಮಾಡುವುದು ಎಂದರೆ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ತತ್ವಕ್ಕೆ ತಿಲಾಂಜಲಿ ಇಡುವುದೇ? ಮಾನವ ಸರಪಳಿಯಿಂದ ಪ್ರಜಾಪ್ರಭುತ್ವ ಉಳಿಯುತ್ತದೆಯೇ? ಜನರ ತೆರಿಗೆ ಹಣದ ಪೋಲು ಪ್ರಜಾಪ್ರಭುತ್ವಕ್ಕೆ ಭೂಷಣವೇ? ಮೊದಲು ಸ್ಥಳೀಯ ಸಂಸ್ಥೆ ಚುನಾವಣೆ ಘೋಷಿಸಿ. ನೈಜ ಪ್ರಜಾಪ್ರಭುತ್ವದ ಸರಪಳಿಯನ್ನು ಗಟ್ಟಿಗೊಳಿಸಿ ಎಂದು ಸಲಹೆ ನೀಡಿದ್ದಾರೆ.