ನವದೆಹಲಿ: ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೋಟಿಸ್ ನೀಡಿದೆ.
ಸಿಬಿಐ (CBI) ತನಿಖೆಗೆ ನೀಡಿದ ಆದೇಶವನ್ನು ಹಿಂಪಡೆದ ರಾಜ್ಯ ಸರ್ಕಾರದ ಆದೇಶದ ವಿರುದ್ಧ ಶಾಸಕ ಬಸನಗೌಡ ಯತ್ನಾಳ್ (Basanagouda Patil Yatnal) ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ (Supreme Court) ಡಿಕೆಶಿ ಹಾಗೂ ಸಿಬಿಐಗೆ (CBI) ನೋಟಿಸ್ ನೀಡಿದೆ.
ನ್ಯಾ. ಸೂರ್ಯಕಾಂತ್ ನೇತೃತ್ವದ ದ್ವಿ ಸದಸ್ಯ ಪೀಠ ಈ ಅರ್ಜಿಯ ವಿಚಾರಣೆ ನಡೆಸಿತು. ರಾಜ್ಯ ಸರ್ಕಾರ ನೀಡಿರುವ ಲೋಕಾಯುಕ್ತ ತನಿಖೆಗೆ ತಡೆ ನೀಡಬೇಕು ಮತ್ತು ಸರ್ಕಾರ ಮಾಡಿರುವ ಆದೇಶಕ್ಕೆ ತಡೆ ನೀಡಬೇಕು ಎಂದು ಯತ್ನಾಳ್ ಪರ ವಕೀಲರು ಮನವಿ ಮಾಡಿದ್ದರು. ಆದರೆ, ಲೋಕಾಯುಕ್ತ ತನಿಖೆ ತಡೆ ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿತು. ಒಂದು ವೇಳೆ ತನಿಖೆ ನ್ಯಾಯಬದ್ಧವಾಗಿಲ್ಲ ಎಂದಾದರೆ ಮತ್ತೆ ಸುಪ್ರೀಂಕೋರ್ಟ್ ಸಂಪರ್ಕ ಮಾಡಬಹುದು ಎಂದು ಸೂಚಿಸಿತು.
ಪ್ರತಿವಾದಿಗಳಾದ ಡಿ.ಕೆ ಶಿವಕುಮಾರ್ ಮತ್ತು ಸಿಬಿಐಗೆ ನೋಟಿಸ್ ನೀಡಲಾಗವುದು. ಸಿಬಿಐ ಇಲ್ಲಿಯವರೆಗೂ ಯಾವುದೇ ಅರ್ಜಿ ಸಲ್ಲಿಸಿಲ್ಲ, ಅದರ ಮುಂದಿನ ನಡೆ ಏನು ಎಂಬುದನ್ನು ತಿಳಿಸಬೇಕು. ಡಿ.ಕೆ ಶಿವಕುಮಾರ್ ಮೂರು ವಾರಗಳಲ್ಲಿ ಅಕ್ಷಪಣೆ ಸಲ್ಲಿಸಲಿ. ಬಳಿಕ ಇನ್ನೊಂದು ವಾರದಲ್ಲಿ ಯತ್ನಾಳ್ ಆಕ್ಷೇಪಣೆಗೆ ಪ್ರತಿಕ್ರಿಯೆ ನೀಡಬೇಕು ಎಂದ ಕೋರ್ಟ್ ನಾಲ್ಕು ವಾರಗಳ ಬಳಿಕ ವಿಚಾರಣೆ ನಡೆಸುವುದಾಗಿ ಸೂಚಿಸಿತು.