ಭೋಪಾಲ್: ಅಕ್ರಮ ಪಟಾಕಿ ಕಾರ್ಖಾನೆ ಸ್ಫೋಟಗೊಂಡ ಪರಿಣಾಮ 11 ಜನ ಸಾವನ್ನಪ್ಪಿರುವ ಘಟನೆಯೊಂದು ನಡೆದಿದೆ.
ಈ ಘಟನೆ ಮಧ್ಯಪ್ರದೇಶದ (Madhya Pradesh) ಹರ್ದಾ ಜಿಲ್ಲೆಯ ಬೈರಾಗರ್ ಪ್ರದೇಶದಲ್ಲಿ ನಡೆದಿದೆ. ಘಟನೆಯಲ್ಲಿ 11 ಜನ ಸಾವನ್ನಪ್ಪಿದ್ದಲ್ಲದೇ, ಕನಿಷ್ಠ 60 ಜನ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಳವಾಗಬಹುದು ಎಂದು ವೈದ್ಯರು ತಿಳಿಸಿದ್ದಾರೆ.
ಅಲ್ಲದೇ, ಸುಮಾರು ಅರವತ್ತು ಮನೆಗಳು ನಾಶವಾಗಿವೆ. ನಿರಂತರ ಸ್ಫೋಟಗಳು ಸಂಭವಿಸಿದ ಕಾರಣ 100ಕ್ಕೂ ಹೆಚ್ಚು ಮನೆಗಳಲ್ಲಿದ್ದ ಜನರನ್ನು ಅಧಿಕಾರಿಗಳು ಸ್ಥಳಾಂತರಿಸಿದ್ದಾರೆ. ಹಲವು ವಾಹನಗಳು ಕೂಡ ಬೆಂಕಿಗೆ ಆಹುತಿಯಾಗಿವೆ ಎಂದು ತಿಳಿದು ಬಂದಿದೆ.
ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ಮಾಡುತ್ತಿದ್ದಾರೆ. ಇಂದೋರ್ ವೈದ್ಯಕೀಯ ಕಾಲೇಜು ಹಾಗೂ ಏಮ್ಸ್ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಸಿಎಂ ಮೋಹನ್ ಯಾದವ್ (Mohan Yadav) ಎಕ್ಸ್ ನಲ್ಲಿ ತಿಳಿಸಿದ್ದಾರೆ.