ರಾಜ್ಯದಲ್ಲಿ ಈಗಾಗಲೇ ಚಳಿಗಾಲ ಆರಂಭವಾಗಿದ್ದು, ಹಲವೆಡೆ ವಿಪರೀತ ಚಳಿ ಇದ್ದರೆ, ಕೆಲವಡೆ ಕ್ರಮೇಣ ಹೆಚ್ಚಾಗುತ್ತ ಸಾಗುತ್ತಿದೆ. ಈ ಮಧ್ಯೆ ಹವಾಮಾನ ಇಲಾಖೆ ಮಳೆಯ ಮುನ್ಸೂಚನೆಯನ್ನೂ ನೀಡಿದೆ.
ರಾಜ್ಯದಲ್ಲಿ ಸಂಜೆಯವ ವೇಳೆಗೆ ಹೆಚ್ಚಿನ ಚಳಿ ಇರಲಿದೆ. ತಾಪಮಾನ ಕಡಿಮೆಯಾಗುವ ಸಾಧ್ಯತೆ ಇದೆ. ಅಲ್ಲದೇ, ಮಳೆಯಾಗುವ ಸಾಧ್ಯತೆಯೂ ಇದೆ. ಬುಧವಾರ (ನ.27) ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಬೆಂಗಳೂರಿನಲ್ಲಿ ವಾಡಿಕೆಯಂತೆ ಡಿಸೆಂಬರ್ ಎರಡನೇ ವಾರ ಚಳಿ ಹೆಚ್ಚಾಗುತ್ತಿತ್ತು. ಆದರೆ, ಈ ಬಾರಿ ನವೆಂಬರ್ ನಲ್ಲೇ ಹೆಚ್ಚಾಗಿದೆ. ಇದರೊಂದಿಗೆ ಮುಂದಿನ 48 ಗಂಟೆಗಳ ಕಾಲ ಮೋಡ ಕವಿದ ವಾತಾವರಣ ಇರಲಿದೆ. ಕನಿಷ್ಠ ತಾಪಮಾನ ಸಾಮಾನ್ಯಕ್ಕಿಂತ 2-5 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗಲಿದೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮತ್ತು ಚಳಿ ಹೆಚ್ಚಾಗಲಿದೆ.
ಬೆಂಗಳೂರಿನಲ್ಲಿ ಮುಂದಿನ ಮೂರು ದಿನ ಮಳೆಯಾಗುವ ಸಾಧ್ಯತೆ ಕೂಡ ಇದೆ. ಅಲ್ಲದೇ, ದಕ್ಷಿಣ ಒಳನಾಡು, ಉತ್ತರ ಒಳನಾಡು, ಕಾರಾವಳಿಗೂ ಮಳೆ ಮುನ್ಸೂಚನೆ ನೀಡಲಾಗಿದೆ. ಹವಾಮಾನ ವೈಪರೀತ್ಯದಿಂದಾಗಿ ಬೆಂಗಳೂರಿನಲ್ಲಿ ಇನ್ನೂ ಮೂರು ದಿನ ಚಳಿ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.








