ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 57,117 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಇದು ಈವರೆಗಿನ ದೈನಂದಿನ ದಾಖಲೆಯಾಗಿದೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ಪ್ರಕಾರ, ಒಂದೇ ದಿನ ದೇಶದಲ್ಲಿ 57,117 ಮಂದಿಯಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 16,95,988ಕ್ಕೆ ಏರಿಕೆಯಾಗಿದೆ. ಮತ್ತೊಂದೆಡೆ ಒಂದೇ ದಿನ 764 ಮಂದಿ ಸಾವನ್ನಪ್ಪಿದ್ದು, ಈ ವರೆಗೆ ಸೋಂಕಿಗೆ ಬಲಿಯಾದವರ ಸಂಖ್ಯೆ 36,511ನ್ನು ಮುಟ್ಟಿದೆ.
ದೇಶದ ಒಟ್ಟಾರೆ 16,95,988 ಮಂದಿ ಸೋಂಕಿತರ ಪೈಕಿ 10,94,374 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ದೇಶದಲ್ಲಿನ್ನೂ 5,65,103 ಮಂದಿ ಸೋಂಕಿನಿಂದ ಬಳಲುತ್ತಿದ್ದು, ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.