ಕಿತ್ತೂರು ಉತ್ಸವಕ್ಕೆ ಸಿಎಂ ಬೊಮ್ಮಾಯಿ ಚಾಲನೆ
ವೀರ ರಾಣಿ ಕಿತ್ತೂರು ಚೆನ್ನಮ್ಮ ಜನ್ಮದಿನವಾದ ಇಂದು ಹುಬ್ಬಳ್ಳಿಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು.
ಇದೇ ಸಂದರ್ಭದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಗೌರವ ನಮನ ಸಲ್ಲಿಸಿದರು.
ಬಳಿಕ ಮುಖ್ಯಮಂತ್ರಿಗಳು ಮಾತನಾಡಿ, ಕನ್ನಡನಾಡಿನ ವೀರ ವನಿತೆ, ಧೈರ್ಯ, ಸ್ವಾಭಿಮಾನಗಳ ಸಾಕಾರಮೂರ್ತಿ. ನಾಡಿನ ಸ್ವಾತಂತ್ರ್ಯಕ್ಕಾಗಿ ಬ್ರಿಟೀಷರ ವಿರುದ್ಧ ಕೆಚ್ಚೆದೆಯಿಂದ ಹೋರಾಡಿದ ಚೆನ್ನಮ್ಮನವರ ಶೌರ್ಯ, ಸಾಹಸ, ಹೋರಾಟಗಳು ನಾಡಿನ ಹೆಮ್ಮೆ ಎಂದರು.
ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಪ್ರಸಕ್ತ ವರ್ಷದಲ್ಲಿ 50 ಕೋಟಿ ರೂಪಾಯಿಗಳ ಕ್ರಿಯಾಯೋಜನೆಗೆ ಅನುಮೋದನೆ ನೀಡಲಾಗುವುದು. ಕಿತ್ತೂರು ರಾಣಿ ಚೆನ್ನಮ್ಮ ಬೆಳಗಾವಿಗೆ ಮಾತ್ರ ಸೀಮಿತವಾಗದೆ ಇಡೀ ರಾಜ್ಯಕ್ಕೆ ತಮ್ಮದೇ ಆದ ಅನನ್ಯ ಕೊಡುಗೆ ನೀಡಿದ್ದಾರೆ. ಅವರ ಆಶೋತ್ತರಗಳನ್ನು ಈಡೇರಿಸುವ ಕೆಲಸಕ್ಕೆ ಸರ್ಕಾರ ಆದ್ಯತೆ ನೀಡಲಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಚಿವರಾದ ಮುರುಗೇಶ್ ನಿರಾಣಿ, ಶಂಕರ ಪಾಟೀಲ ಮುನೇನಕೊಪ್ಪ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.